ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಸಾಮಾಜಿಕ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಡಿಸೆಂಬರ್ 2025ರಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ್ದ ಸೆಪ್ಟೆಂಬರ್ 2ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿ ಈ ತೀರ್ಪು ನೀಡಿದೆ.
ಉಮರ್ ಖಾಲಿದ್ ಹಾಗೂ ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಜಾಗೊಂಡಿದ್ದರೂ, ಇದೇ ಪ್ರಕರಣದಲ್ಲಿ ಆರೋಪಿಗಳಾಗಿರುವ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಮೊಹಮ್ಮದ್ ಸಮೀರ್ ಖಾನ್, ಶಾದಾಬ್ ಅಹ್ಮದ್ ಹಾಗೂ ಶಿಫಾ ಉರ್ ರೆಹಮಾನ್ ಅವರಿಗೆ ಸುಪ್ರೀಂ ಕೋರ್ಟ್ 12 ಷರತ್ತುಗಳೊಂದಿಗೆ ಜಾಮೀನು ನೀಡಿದೆ.
ಕ್ರಿಮಿನಲ್ ಪಿತೂರಿಯಲ್ಲಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಇಬ್ಬರೂ ಭಾಗಿಯಾಗಿರುವುದನ್ನು ಸೂಚಿಸುವ ಸಾಕಷ್ಟು ಪುರಾವೆಗಳನ್ನು ಪ್ರಾಸಿಕ್ಯೂಷನ್ ಸಲ್ಲಿಸಿದೆ. ಅವುಗಳು ನ್ಯಾಯಾಲಯಕ್ಕೆ ತೃಪ್ತಿ ತಂದಿವೆ ಎಂದು ಪೀಠ ಸ್ಪಷ್ಟಪಡಿಸಿದೆ.



