ವಿಜಯಸಾಕ್ಷಿ ಸುದ್ದಿ, ಗದಗ : ಸಂವಿಧಾನವು ನಮ್ಮ ದೇಶದ ಪವಿತ್ರ ಗ್ರಂಥವಾಗಿದೆ. ಬಾಬಾಸಾಹೇಬ ಅಂಬೇಡ್ಕರ ಅವರು ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳು ಸಿಗಬೇಕೆಂದು ಭಾರತಕ್ಕೆ ಸಂವಿಧಾನವನ್ನು ನೀಡಿದ್ದಾರೆ. ನಮ್ಮ ದೇಶದ ಸಂವಿಧಾನದ ಮೂಲಕವೇ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ನಡೆಯುತ್ತಿರುವುದು ಎಂಬುದನ್ನು ಮರೆತು ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು, ಕೂಡಲೇ ಇಂತಹ ಸಂವಿಧಾನ ವಿರೋಧಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಂಚಾಲಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಆಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಮಾತನಾಡಿ, ಸಂಸದ ಅನಂತಕುಮಾರ ಹೆಗಡೆ ನಿರಂತರವಾಗಿ ನಮ್ಮ ದೇಶದ ಸಂವಿಧಾನದ ವಿರುದ್ಧ ಹೇಳಿಕೆಗಳನ್ನು ನೀಡಿ ಸಂವಿಧಾನಕ್ಕೆ ಅಪಮಾನ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಚುನಾವಣೆ ಹತ್ತಿರವಾಗುತ್ತಿದಂತೆ ಸಂವಿಧಾನ ವಿರೋಧಿ ಪೌರತ್ವ ಕಾಯ್ದೆಯನ್ನು ಜಾರಿಗೆ ತಂದು ನಮ್ಮ ದೇಶದಲ್ಲಿ ವಾಸವಾಗಿರುವ ಕೊಟ್ಯಾಂತರ ಅಲ್ಪಸಂಖ್ಯಾತರ ಸಮುದಾಯಗಳಿಗೆ ಆತಂಕ ಸೃಷ್ಟಿಸುತ್ತಿದೆ. ಕೇಂದ್ರ ಸರ್ಕಾರದ ಜನವೀರೋಧಿ ನೀತಿ ಮತ್ತು ಸಂವಿಧಾನ ವಿರೋಧಿ ಕಾಯ್ದೆ ಇದಾಗಿದ್ದು, ಕೂಡಲೇ ಈ ಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ರವಿಕುಮಾರ ಬೆಳಮಕರ, ಅಶೋಕ ಕುಸಬಿ, ಇಬ್ರಾಹಿಮ ಮುಲ್ಲಾ, ಶಿವಾನಂದ ಶಿಗ್ಲಿ, ಮಂಜುನಾಥ ಶ್ರೀಗಿರಿ, ರೇವಣಪ್ಪ ಲಕ್ಕುಂಡಿ, ಬಸವರಾಜ ಅಗಸಿಕೇರಿ, ರಾಜೇಸಾಬ ತಹಸೀಲ್ದಾರ, ಚಮನಸಾಬ ನದಾಫ ಮುಂತಾದವರು ಉಪಸ್ಥಿತರಿದ್ದರು.