ಬೆಳಗಾವಿ:- ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.
ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಇಂದು ಹೋರಾಟ 7ನೇ ದಿನಕ್ಕೆ ಕಾಲಿಟ್ಟಿದೆ. ಈ ಪ್ರತಿಭಟನೆಯಲ್ಲಿ ಚಳಿ, ಗಾಳಿ, ಮಳೆಗಳನ್ನೆಲ್ಲ ಲೆಕ್ಕಿಸದೆ ರೈತರು ಹೋರಾಟ ಮುಂದುವರೆಸಿದ್ದಾರೆ.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹುಟ್ಟುಹಬ್ಬದ ಸಂಭ್ರಮ ಬದಿಗಿಟ್ಟು, ಮಂಗಳವಾರದಿಂದಲೇ ರೈತರ ಜೊತೆ ಹೋರಾಟಕ್ಕಿಳಿದಿದ್ದಾರೆ. ಅವರು ಬೆಳಗಾವಿಯ ಗುರ್ಲಾಪುರದಲ್ಲಿ ರೈತರ ಜೊತೆ ರಾತ್ರಿ ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ವಿಜಯೇಂದ್ರ ಮಾತನಾಡುತ್ತಾ, ರೈತರು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ರೀತಿಯ ಸ್ಪಂದನೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಕೇಂದ್ರದ ಸಹಕಾರದಿಂದ ಬೆಂಬಲ ಬೆಲೆ ನಿಗದಿಗೆ ಪ್ರಯತ್ನ ಮಾಡುವುದಾಗಿ ಹೇಳಿದ್ದರೂ, ವಿಜಯೇಂದ್ರ ಅವರು ತಿರುಗೇಟು ನೀಡಿದರು. ಇದೇ ವೇಳೆ ಸರ್ಕಾರದ ಸೂಚನೆಯಂತೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಇಂದು ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಹೋರಾಟದ ವೇದಿಕೆಯಲ್ಲಿ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಅವರು ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಯಿಂದ 3,500 ರೂ. ಹಾಗೂ ಕೇಂದ್ರ-ರಾಜ್ಯಗಳಿಂದ 2,000 ರೂ. ಸೇರಿ ಒಟ್ಟು 5,500 ರೂ. ನೀಡಬೇಕು ಎಂದು ಆಗ್ರಹಿಸಿದರು. ಬೇಡಿಕೆ ಈಡೇರದಿದ್ದರೆ ನವೆಂಬರ್ 7ರಂದು ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು. ಈ ನಡುವೆ ಅಥಣಿ ಸೇರಿದಂತೆ ಹಲವೆಡೆಗಳಲ್ಲಿ ರೈತರ ಪ್ರತಿಭಟನೆ ಕಾವೇರಿದ್ದು, ಸಚಿವ ಶಿವಾನಂದ ಪಾಟೀಲ್ ವಿರುದ್ಧ ಅಣಕು ಶ್ರದ್ಧಾಂಜಲಿ ಅರ್ಪಿಸುವ ಮೂಲಕ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.


