ಮೈಸೂರು: ಸ್ವರ ಸರಸ್ವತಿ ಎಂದೇ ಖ್ಯಾತರಾಗಿದ್ದ ಗಾನಕೋಗಿಲೆ ಎಸ್. ಜಾನಕಿ ಅವರಿಗೂ ಮೈಸೂರಿಗೂ ವಿಶೇಷ ನಂಟು ಇತ್ತು. ತಮ್ಮ ಜೀವನದ ಕೊನೆಯ ವರ್ಷಗಳನ್ನು ಮೈಸೂರಿನಲ್ಲೇ ಕಳೆದಿದ್ದ ಜಾನಕಮ್ಮ, ತಾವು ಮೈಸೂರಿನಲ್ಲೇ ಅಂತ್ಯವಾಗಬೇಕು ಎಂಬ ಇಚ್ಛೆ ಹೊಂದಿದ್ದರು ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಎಸ್. ಜಾನಕಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರು ಹಾಗೂ ಗಣ್ಯರಿಗೆ ವ್ಯವಸ್ಥೆ ಮಾಡಲಾಗಿತ್ತು. ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸಿ ಗಾನಕೋಗಿಲೆಗೆ ಅಂತಿಮ ನಮನ ಸಲ್ಲಿಸಿದರು.
ಅದರಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಕೂಡ ಜಾನಕಮ್ಮ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್. ಜಾನಕಿ ಅವರ ಸ್ಮಾರಕ ನಿರ್ಮಾಣ ಮಾಡಬೇಕು ಎಂಬ ಸಾರ್ವಜನಿಕರ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.
ಸ್ಮಾರಕ ನಿರ್ಮಾಣದಂತಹ ಪ್ರಮುಖ ನಿರ್ಧಾರವನ್ನು ಸರ್ಕಾರದ ಮಟ್ಟದಲ್ಲಿ ಮುಖ್ಯಮಂತ್ರಿಗಳೇ ತೆಗೆದುಕೊಳ್ಳಬೇಕಾಗುತ್ತದೆ. ಈ ಕುರಿತು ತಾವು ಕೂಡ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ಸಚಿವರು ಹೇಳಿದರು.



