ಅಸಂಘಟಿತ ಕಾರ್ಮಿಕರ ಜೀವನ ಸುಧಾರಣೆಗೆ ಇಲಾಖೆ ಬದ್ಧ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: `ಶ್ರಮ ಏವ ಜಯತೇ’ ಎಂಬ ನುಡಿಯಂತೆ ದೇಶದಲ್ಲಿ ಸಣ್ಣ ಸಣ್ಣ ವೃತ್ತಿಯನ್ನು ಮಾಡಿ ಶ್ರಮ ಜೀವಿಯಾಗಿ ಜೀವನ ನಡೆಸುತ್ತಿರುವ 91 ಅಸಂಘಟಿತ ವರ್ಗಗಳ ಕಾರ್ಮಿಕರಿದ್ದಾರೆ. ಸದರಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಅವರ ಜೀವನ ಮಟ್ಟ ಸುಧಾರಣೆಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದ್ದು, ಈ ಯೋಜನೆಯ ಸೌಲಭ್ಯವನ್ನು ಅಸಂಘಟಿತ ಕಾರ್ಮಿಕರು ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ತಿಳಿಸಿದರು.

Advertisement

ನಗರದ ವಿವೇಕಾನಂದ ಸಭಾಂಗಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿವರು ಮಾತನಾಡಿದರು.

ಸಂಘಟಿತ ಕಾರ್ಮಿಕರಿಗೆ ದೊರಕುವ ಕಾನೂನಾತ್ಮಕ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೂ ಒದಗಿಸಬೇಕೆಂಬುದು ಸರ್ಕಾರದ ಧ್ಯೇಯೋದ್ದೇಶವಾಗಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸದರಿ ಕಾರ್ಮಿಕರನ್ನು ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್‌ ಗಳನ್ನು ನೀಡಲಾಗುತ್ತಿದೆ. ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಸೌಲಭ್ಯಗಳು ಕಾರ್ಮಿಕರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ವ್ಯಾಪಕ ಪ್ರಚಾರವೂ ಅತ್ಯಗತ್ಯವಾಗಿದೆ ಎಂದರು.

ಅಪಘಾತಗಳಿಂದ 18ರಿಂದ 45 ವರ್ಷ ವಯೋಮಾನದ ಒಳಗಿನ ಶೇ.50 ಜನರು ಮರಣ ಹೊಂದುತ್ತಿದ್ದಾರೆ. ವಾಹನ ಸಂಚಾರಿಗಳ ಸುರಕ್ಷತೆಗಾಗಿ ಹೆಲ್ಮೆಟ್ ಕಡ್ಡಾಯಗೊಳಿಸಬೇಕು. ಅಲ್ಲದೇ ಸಂಚಾರಿ ನಿಯಮಗಳ ಪಾಲನೆಯಾಗಬೇಕು. ಆ ಮೂಲಕ ಜೀವಹಾನಿ ನಿಯಂತ್ರಣವಾಗಲಿ ಎಂದರು.

ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಜಿಲ್ಲೆಯ ಅಸಂಘಟಿತ ಕಾರ್ಮಿಕರಿಗೆ 25 ಸ್ಮಾಟ್ ಕಾರ್ಡ್‌ ಗಳನ್ನು, 4 ಅಪಘಾತ ಪರಿಹಾರ ಚೆಕ್, 1 ಆಶಾ ದೀಪ ಯೋಜನೆ ಚೆಕ್‌ನ್ನು ಕಾರ್ಮಿಕ ಸಚಿವರು ವಿತರಿಸಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿಗಳು ಹಾಗೂ ಜಂಟಿ ಕಾರ್ಮಿಕ ಆಯುಕ್ತರಾದ ಡಾ. ಎಸ್.ಬಿ. ರವಿಕುಮಾರ್ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಗ್ಯಾರಂಟಿ ಸಮಿತಿ ಸದಸ್ಯ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ, ಬರ್ಕತ್‌ಅಲಿ ಮುಲ್ಲಾ, ಗದಗ ಉಪವಿಭಾಗದ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ವೈ.ಹಳೇಮನಿ, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರು ಹಾಜರಿದ್ದರು.

ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಿ.ಜಿ. ನಾಗೇಶ ಸ್ವಾಗತಿಸಿದರು. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು. ಗದಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ 1548ಕ್ಕೂ ಹೆಚ್ಚು ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಲಾಯಿತು.

ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿ ರಾಜ್ಯದ ಎಲ್ಲ ಅಸಂಘಟಿತ ಕಾರ್ಮಿಕರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಸಾಮಾಜಿಕ ಭದ್ರತೆ ಒದಗಿಸಿ ಅವರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕವಾಗಿ ಹಾಗೂ ಅರ್ಥಿಕವಾಗಿ ದುರ್ಬಲರಾಗಿದ್ದು, ಸಂಘಟಿತ ಕಾಮಿಕರಿಗೆ ದೊರಕುವ ಎಲ್ಲ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೆ ದೊರಕಬೇಕೆಂಬುದು ಈ ಕಾರ್ಯಕ್ರಮದ ಉದ್ದೆಶವಾಗಿದೆ ಎಂದರು.

“ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡಜನರ ಬದುಕನ್ನು ಬಂಗಾರವಾಗಿಸಿವೆ. 500 ಕೋಟಿ ಹೆಣ್ಣು ಮಕ್ಕಳು ಶಕ್ತಿ ಯೋಜನೆ ಫಲಾನುಭವಿಗಳಾಗಿದ್ದಾರೆ. ಮಹಿಳೆಯರಿಗೆ ರಾಜ್ಯದ ಮೂಲೆ ಮೂಲೆಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಸರ್ಕಾರದಿಂದ ಬಡಜನರ ಶ್ರೇಯೋಭಿವೃದ್ಧಿಗೆ ಪಂಚ ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ 60 ಸಾವಿರ ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ”

– ಸಂತೋಷ ಲಾಡ್.

ಕಾರ್ಮಿಕ ಸಚಿವರು.


Spread the love

LEAVE A REPLY

Please enter your comment!
Please enter your name here