ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿ ಹಾಗೂ ಸುಳ್ಳು ಮಾಹಿತಿ ಒಳಗೊಂಡ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್ ಸಾಮಾಜಿಕ ಜಾಲತಾಣ ಘಟಕದ ಆಡ್ಮಿನ್ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಜೆಡಿಎಸ್‌ಗೆ ಸಂಬಂಧಿಸಿದ ಸಾಮಾಜಿಕ ಜಾಲತಾಣದ ಪುಟದಲ್ಲಿ ಮುಖ್ಯಮಂತ್ರಿ ವಿರುದ್ಧ ಆಕ್ಷೇಪಾರ್ಹ ಹಾಗೂ ತಪ್ಪು ಮಾಹಿತಿ ಒಳಗೊಂಡ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿತ್ತು.
‘ಹಳೆ ಚಾಳಿ ಮತ್ತೆ ಶುರು, ಸುಟ್ಟರೂ ಹೋಗದ ಹುಟ್ಟುಗುಣ’ ಎಂಬ ಶೀರ್ಷಿಕೆಯಡಿ ವಿಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ಅದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿ ಹಾಗೂ ಸುಳ್ಳು ಮಾಹಿತಿಯನ್ನು ಒಳಗೊಂಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ‘ಕುಮಾರಸ್ವಾಮಿ ಫಾರ್ ಸಿಎಂ’ ಹಾಗೂ ‘ಜೆಡಿಎಸ್ ಸೆಕ್ಯುಲರ್ ಸೋಷಿಯಲ್ ಮೀಡಿಯಾ’ ಹೆಸರಿನ ಸಾಮಾಜಿಕ ಜಾಲತಾಣ ಪುಟಗಳ ವಿರುದ್ಧ ನೀಡಲಾದ ದೂರಿನ ಆಧಾರದ ಮೇಲೆ ಸದಾಶಿವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.



