ದೇವನಹಳ್ಳಿ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.
ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸೀಟ್‌ನ್ನು ಹಿಂದಕ್ಕೆ ಮಡಚಿಕೊಂಡು ಮಲಗಿದ್ದ ಸ್ಥಿತಿಯಲ್ಲಿ ಚಾಲಕನ ಶವ ಪತ್ತೆಯಾಗಿದೆ. ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಎದ್ದಿಲ್ಲವೆಂದು ಅನುಮಾನಗೊಂಡ ಸ್ಥಳೀಯರು ಎಬ್ಬಿಸಲು ಯತ್ನಿಸಿದ್ದಾರೆ. ಆದರೆ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಕಾರಿನೊಳಗೆ ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಪ್ರಾಥಮಿಕ ತನಿಖೆಯಲ್ಲಿ ಹೃದಯಾಘಾತದಿಂದ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಮೃತನ ಜೇಬಿನಲ್ಲಿ ಶಿಡ್ಲಘಟ್ಟ ತಾಲೂಕಿನ ತಾಳಹಳ್ಳಿ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಘಟನೆ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



