ಬೆಂಗಳೂರು: ರಾಜ್ಯಸಭಾ ಸದಸ್ಯತ್ವದ ಟಿಕೆಟ್ ಕೈತಪ್ಪಿದ ವಿಚಾರವನ್ನು ಮುಂದಿಟ್ಟು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ತಮ್ಮ ಸಂಬಂಧವನ್ನು ಪ್ರಶ್ನಿಸುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಲವು ದಶಕಗಳಿಂದ ಉತ್ತಮ ಸಂಬಂಧ ಹೊಂದಿದ್ದೇನೆ. ರಾಜ್ಯಸಭಾ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಆ ಸಂಬಂಧದಲ್ಲಿ ಯಾವುದೇ ಬಿರುಕು ಮೂಡುವುದಿಲ್ಲ ಎಂದು ಹೇಳಿದರು.
ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿಕೂಟದ ಭಾಗವಾಗಿದ್ದು, ಮುಂದೆಯೂ ಅದೇ ಮೈತ್ರಿಯಲ್ಲಿ ಕಾರ್ಯನಿರ್ವಹಿಸಲಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಸಂಪುಟದಲ್ಲಿ ಮುಂದುವರಿದು ದೇಶದ ಸೇವೆ ಸಲ್ಲಿಸಲಿದ್ದಾರೆ ಎಂದು ದೇವೇಗೌಡ ತಿಳಿಸಿದರು.
ರಾಜ್ಯಸಭಾ ಸ್ಥಾನ ಕುರಿತು ಮಾತನಾಡಿದ ಅವರು, ತಮಗೆ ನಿಜವಾಗಿಯೂ ರಾಜ್ಯಸಭಾ ಸದಸ್ಯತ್ವದ ಆಸಕ್ತಿ ಇದ್ದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಗೃಹ ಸಚಿವರೊಂದಿಗೆ ಈ ಬಗ್ಗೆ ಚರ್ಚಿಸಬಹುದಾಗಿತ್ತು. ಆದರೆ ತಾವು ಅಂತಹ ಯಾವುದೇ ಪ್ರಯತ್ನ ಮಾಡಿಲ್ಲ. ರಾಜ್ಯಸಭೆಗೆ ಹೋಗುವ ಆಸಕ್ತಿ ನನಗಿರಲಿಲ್ಲ. ಆದ್ದರಿಂದ ಈ ವಿಚಾರವಾಗಿ ಯಾರನ್ನೂ ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.



