ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ಧನ್ವೀರ್ ಗೌಡ ಪೊಲೀಸರ ವಿಚಾರಣೆ ಎದುರಿಸಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಇಂದು (ನವೆಂಬರ್ 25) ಹಾಜರಾದ ಧನ್ವೀರ್ ಅವರನ್ನು ಪೊಲೀಸರು ಎರಡು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಆರ್.ಆರ್. ನಗರ ಠಾಣೆ ಪೊಲೀಸರು ಈ ಹಿಂದೆ ಧನ್ವೀರ್ ಅವರಿಗೆ ನೋಟಿಸ್ ನೀಡಿದ್ದರು. ಇದರ ಹಿನ್ನೆಲೆಯಲ್ಲಿ ಠಾಣೆಗೆ ಆಗಮಿಸಿದ ನಟನನ್ನು ಇನ್ಸ್ಪೆಕ್ಟರ್ ಕುಮಾರಸ್ವಾಮಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ನಾಗರಾಜ್ಗೆ ನಿಂದಿಸಿದ ಆರೋಪ:
ವಿಜಯಲಕ್ಷ್ಮಿ ಅವರ ಮ್ಯಾನೇಜರ್ ಆಗಿರುವ ನಾಗರಾಜ್ ಅವರಿಗೆ ನಟ ಧನ್ವೀರ್ ಫೋನ್ ಕರೆ ಹಾಗೂ ಮೆಸೇಜ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ನಾಗರಾಜ್ ಅವರು ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಆರಂಭದಲ್ಲಿ ಪೊಲೀಸರು ಈ ದೂರಿನ ಸಂಬಂಧ ಗಂಭೀರವಲ್ಲದ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ನ್ಯಾಯಾಲಯದ ಆದೇಶದ ಮೇರೆಗೆ ಧನ್ವೀರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಹೈಕೋರ್ಟ್ ಸೂಚನೆಯಂತೆ ವಿಚಾರಣೆಗೆ ಹಾಜರು:
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಧನ್ವೀರ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಸಹಕರಿಸುವಂತೆ ಹಾಗೂ ಪೊಲೀಸರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರ ನೋಟಿಸ್ ಹಾಗೂ ಹೈಕೋರ್ಟ್ ನಿರ್ದೇಶನದಂತೆ ಧನ್ವೀರ್ ಠಾಣೆಗೆ ಹಾಜರಾಗಿದ್ದಾರೆ.
ವಿಚಾರಣೆ ವೇಳೆ ನಾಗರಾಜ್ ವಿರುದ್ಧದ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಧನ್ವೀರ್, “ನಾಗರಾಜ್ ನಮ್ಮ ಮನೆಗೆ ಬಂದು ಗಲಾಟೆ ಮಾಡಿದ್ದ. ಅವನು ಗಲಾಟೆ ಮಾಡಿದ್ದಕ್ಕೆ ನಾನು ಬೈದೆ” ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ದರ್ಶನ್ ಕುಟುಂಬದ ಜೊತೆಗಿನ ಆಪ್ತತೆ, ಬಳಿಕ ಮನಸ್ತಾಪ:
ನಟ ಧನ್ವೀರ್ ಅವರು ಈ ಹಿಂದೆ ದರ್ಶನ್ ಕುಟುಂಬದ ಜೊತೆ ಆಪ್ತವಾಗಿದ್ದರು. ಆದರೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಅವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಮನಸ್ತಾಪ ಹೆಚ್ಚಾಗಿತ್ತು ಎನ್ನಲಾಗಿದೆ. ಇದೀಗ ಈ ವಿವಾದ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯದ ಮೆಟ್ಟಿಲೇರಿದೆ.







