ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ವಿಕಲಚೇತನ ಮಕ್ಕಳು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ವಿಕಲಚೇತನ ಮಕ್ಕಳು ದೇವರ ಸಮಾನರು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.
ಬುಧವಾರ ಇಂದಿರಾ ಗಾಜಿನ ಮನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಜಿಲ್ಲೆಯ ಸ್ವಯಂ ಸೇವಾ ಶಿಕ್ಷಣ ಸಂಸ್ಥೆಗಳು ಮತ್ತು ವಿಕಲಚೇತನರ ಸಂಘ ಸಂಸ್ಥೆಗಳು, ಮಜೇಥೀಯಾ ಫೌಂಡೇಶನ್–ಹುಬ್ಬಳ್ಳಿ, ಅದಮ್ಯ ಚೇತನ ಫೌಂಡೇಶನ್–ಹುಬ್ಬಳ್ಳಿ, “ಸಕ್ಷಮ” ಕರ್ನಾಟಕ–ಉತ್ತರ ಪ್ರಾಂತ, ಹುಬ್ಬಳ್ಳಿ, ಆಶಾಕಿರಣ–ಕಿಮ್ಸ್, ಧಾರವಾಡ ಜಿಲ್ಲೆಯ ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯು ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಸಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ತ್ರಿಚಕ್ರ ವಾಹನ ವಿತರಿಸುವ ಕೆಲಸಗಳನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. ವಿಕಲಚೇತನರಿಗಾಗಿ ಕೇಂದ್ರ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದೆ. ಸುಮಾರು ರೂ. 2 ಕೋಟಿ ವೆಚ್ಚದಲ್ಲಿ ಕಿಮ್ಸ್ಗೆ ವಿಶೇಷಚೇತನರಿಗಾಗಿ ಸಾಧನ ಸಲಕರಣೆಗಳನ್ನು ಒದಗಿಸಲಾಗಿದೆ. ಅಲ್ಲದೇ ರೂ. 23 ಲಕ್ಷ ವೆಚ್ಚದಲ್ಲಿ ವಿಕಲಚೇತನರಿಗೆ ವಿಶೇಷ ಸಾಮಗ್ರಿಗಳನ್ನು ಇಂದು ವಿತರಿಸಲಾಗುತ್ತಿದೆ. ಈ ಹಿಂದೆ ಮೂರು ಸಾವಿರ ಮಠದಲ್ಲಿ ವಿಕಲಚೇತನರ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿತ್ತು. ಒಟ್ಟಿನಲ್ಲಿ ವಿಕಲಚೇತನರಿಗೆ ಅವಕಾಶ ಕಲ್ಪಿಸಿಕೊಡುವ ಕೆಲಸ ಕಾರ್ಯಗಳಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಕಲಚೇತನರಿಗೆ ವಾಹನಗಳು ಹಾಗೂ ಸಾಧನ–ಸಲಕರಣೆಗಳನ್ನು ವಿತರಿಸಲಾಯಿತು. ವಿಶೇಷಚೇತನರ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರು ಹಾಗೂ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಹಾಪೌರರಾದ ಜ್ಯೋತಿ ಪಾಟೀಲ, ಉಪಮಹಾಪೌರ ಸಂತೋಷ ಚವ್ಹಾಣ, ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಇಮ್ರಾನ್ ಯಲಿಗಾರ, ಮಾಜಿ ಮಹಾಪೌರರಾದ ವೀಣಾ ಭರದ್ವಾಡ, ಪಾಲಿಕೆ ಸದಸ್ಯರಾದ ರೂಪಾ ಶೆಟ್ಟಿ, ಬೀರಪ್ಪ ಖಂಡೇಕರ, ಪಾಲಿಕೆಯ ಆಯುಕ್ತರಾದ ಡಾ. ರುದ್ರೇಶ ಘಾಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಚ್.ಎಚ್. ಕುಕನೂರ, ಮಜೇಥಿಯಾ ಫೌಂಡೇಶನ್ ಅಧ್ಯಕ್ಷ ಜಿತೇಂದ್ರ ಮಜೇಥಿಯಾ, ಸಮಾಜದ ಮುಖಂಡರಾದ ಐ.ಕೆ. ಲಕ್ಕುಂಡಿ, ಗುರು ಲಕ್ಕುಂಡಿ, ಮಧುಕರ ಶೆಟ್ಟಿ, ಮಂಜುನಾಥ, ತಾರಾ ಸೇರಿದಂತೆ ಪಾಲಿಕೆ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಅಂಧ ಬಾಲಕರ ಸರ್ಕಾರಿ ಪಾಠಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕ ಅಣ್ಣಪ್ಪ ಕೋಳಿ ವಂದಿಸಿದರು.
ಈಗಾಗಲೇ ನಾನು ವೈಯಕ್ತಿಕವಾಗಿ ಸುಮಾರು 156 ತ್ರಿಚಕ್ರ ಸೈಕಲ್ಗಳನ್ನು ವಿತರಣೆ ಮಾಡಿದ್ದೇನೆ. ಸರ್ಕಾರ ವಿಕಲಚೇತನ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಅವರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಅಲ್ಲದೇ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರದ ವಿವಿಧ ಯೋಜನೆಗಳ ಮೂಲಕ ವಿಕಲಚೇತನರ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ವಿಕಲಚೇತನರ ಕುಂದು–ಕೊರತೆಗಳನ್ನು ಸರ್ಕಾರದ ಮಟ್ಟದಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಬಸವರಾಜ ಹೊರಟ್ಟಿ ತಿಳಿಸಿದರು.



