ವಿಜಯಸಾಕ್ಷಿ ಸುದ್ದಿ, ಧಾರವಾಡ : ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನ ನಡೆಯುವ ದಿನದಂದು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 1,652 ಮತದಾನ ಕೇಂದ್ರಗಳಿಗೆ 1,268 ವೈದ್ಯಕೀಯ ತಂಡಗಳನ್ನು ನಿಯೋಜಿಸಿ, 1,850 ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ಅವಶ್ಯಕ ಔಷಧಿಗಳೊಂದಿಗೆ ಸಿದ್ಧಗೊಳಿಸಿ ಪೂರೈಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೇ. 7ರ ಮತದಾನ ದಿನದಂದು ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಹಾಗೂ ಮತದಾರರ ಆರೋಗ್ಯ ಕಾಳಜಿ, ಅಗತ್ಯವೆನಿಸಿದರೆ ಪ್ರಾಥಮಿಕ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ ಅವರ ನೇತೃತ್ವದಲ್ಲಿ ಅಗತ್ಯ ಸಿದ್ಧತೆ, ಆರೋಗ್ಯ ಸಿಬ್ಬಂದಿಗಳ ನೇಮಕ ಮತ್ತು ಆಂಬ್ಯುಲೆನ್ಸ್ಗಳನ್ನು ನಿಯೋಜನೆ ಮಾಡಲಾಗಿದೆ. ಪ್ರತಿ ಮತಗಟ್ಟೆಗಳ ವೈದ್ಯಕೀಯ ಮೇಲ್ವಿಚಾರಣೆಗಾಗಿ 55 ಸೆಕ್ಟರಲ್ ಅಧಿಕಾರಿಗಳನ್ನು, 10 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಮತದಾನ ಕೇಂದ್ರಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಓಆರ್‌ಎಸ್ ಪಾಕೇಟ್‌ಗಳನ್ನು ನೀಡಲಾಗಿದೆ.
ಉಷ್ಣತೆಯಿಂದ ಸಂಭವಿಸುವ ಕಾಯಿಲೆಗಳಿಗೆ ಅಗತ್ಯವಿರುವ ಔಷಧಿಗಳ ದಾಸ್ತಾನುಗಳನ್ನು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ತಾಲೂಕಾ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಇಡಲಾಗಿದೆ. ವಿಶೇಷ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ ಧಾರವಾಡದಲ್ಲಿ ಐದು ಹಾಸಿಗೆಗಳನ್ನು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಲಾ ಎರಡು ಹಾಸಿಗೆಗಳನ್ನು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ ಒಂದು ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.