ಹಾನಿ ಸಮೀಕ್ಷೆ ಕಾರ್ಯ ನಿಖರವಾಗಿರಲಿ

0
District administration visits and inspects the crop damage area
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರು ಗದಗ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಗದಗ ತಾಲೂಕಿನ ಸಂಭಾಪುರ, ಮುಳಗುಂದ ಸೇರಿದಂತೆ ವಿವಿಧ ಗ್ರಾಮಗಳ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಸ್ಥಿತಿಯನ್ನು ಅವಲೋಕಿಸಿದರು. ಬೆಳೆ ಹಾನಿಯಾದ ರೈತರಿಗೆ ಸರ್ಕಾರದ ಸಹಾಯಧನ ಸರಿಯಾಗಿ ತಲುಪಬೇಕು. ಈ ಬಗ್ಗೆ ಸರ್ಕಾರ ನೀಡಿರುವ ಮಾರ್ಗಸೂಚಿಯನ್ವಯ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಳ್ಳುವ ಮೂಲಕ ಅರ್ಹರಿಗೆ ಸರ್ಕಾರದ ಸಹಾಯಧನ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನವನ್ನು ಇಲಾಖಾಧಿಕಾರಿಗಳು ಸಮನ್ವಯದೊಂದಿಗೆ ನಿರ್ವಹಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.

ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಾದ ಮೆಕ್ಕೆಜೋಳ, ಮೆಣಸಿನಕಾಯಿ, ಈರುಳ್ಳಿ ಬೆಳೆಗಳ ಹಾನಿ ವೀಕ್ಷಣೆ ನಡೆಸಿದ ಅವರು, ಅಧಿಕ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಬೆಳೆ ಹಾನಿ ಜಂಟಿ ಸಮೀಕ್ಷೆ ನಡೆಸುವವರು ಸರಿಯಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು ಹಾಗೂ ಸಮೀಕ್ಷೆ ಕಾರ್ಯವು ನಿಖರತೆಯಿಂದ ಕೂಡಿರಲಿ ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟೆಮನಿ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು, ರೈತರು, ಸಾರ್ವಜನಿಕರು ಹಾಜರಿದ್ದರು.

ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಳೆ ಹಾನಿಗೊಳಗಾದ ರೈತರು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಲ್ಲಿ ಸರ್ಕಾರದಿಂದ ಬೆಳೆ ಹಾನಿ ನಷ್ಟವನ್ನು ಕೊಡಿಸುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ಜಿಲ್ಲಾಧಿಕಾರಿಗಳು ಮಾತನಾಡಿ, ಹಾನಿ ಸಮೀಕ್ಷೆ ಕಾರ್ಯ ನಡೆಯುತ್ತಲಿದೆ. ಸರ್ಕಾರದ ನಿಯಮಾವಳಿಗಳಲ್ಲಿ ಇರುವ ಅವಕಾಶಗಳನ್ನು ಬಳಸಿಕೊಂಡು ಬೆಳೆ ಹಾನಿಯಾದ ಅರ್ಹ ರೈತರಿಗೆ ಪರಿಹಾರ ಒದಗಿಸಲು ಪ್ರಾಮಾಣಿಕ ಕಾರ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.

 


Spread the love

LEAVE A REPLY

Please enter your comment!
Please enter your name here