ಕುಷ್ಠರೋಗ ಜಾಗೃತಿ ಅಭಿಯಾನದ ಪಾಕ್ಷಿಕ ಆಚರಣೆ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆ

0
Spread the love

 

Advertisement

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಜನವರಿ 30ರಿಂದ ಫೆಬ್ರುವರಿ 13ರವರೆಗೆ ಕುಷ್ಠರೋಗ ಜಾಗೃತಿ ಅಭಿಯಾನ ಆಯೊಜಿಸಲಾಗಿದ್ದು, ವಿವಿಧ ಇಲಾಖೆಗಳ ಸಮನ್ವಯತೆಯಿಂದ ಈ ಅಭಿಯಾನವನ್ನು ಪರಿಣಾಮಕಾರಿಯಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸ್ಪ಼ರ್ಶ ಕುಷ್ಠರೋಗ ಜಾಗೃತಿ ಅಭಿಯಾನದ ಪಾಕ್ಷಿಕ ಆಚರಣೆ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಷ್ಠರೋಗದ ಕುರಿತು ಜನಸಾಮಾನ್ಯರಲ್ಲಿ ಭಯ ಬೇಡ. ಕುಷ್ಠರೋಗವನ್ನು ಶೀಘ್ರವಾಗಿ ಪತ್ತೆ ಹಚ್ಚುವುದು ಮುಖ್ಯವಾಗಿದೆ. ಕುಷ್ಠರೋಗಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಬಹುವಿಧ ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ ಕುಷ್ಠರೋಗಿಗಳಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ನೀಡೋಣ. ಈ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಂಡು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ನಿರ್ದೇಶನ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕುಷ್ಠರೋಗ ವಿಭಾಗದ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ.ಕೆ. ಭಜಂತ್ರಿ, ತಾಲೂಕಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ, ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ರಾಜೇಂದ್ರ ಬಸರಿಗಿಡದ ಮಾತನಾಡಿ, ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಜ.30ರಿಂದ ಫೆ.13ರವರೆಗೆ ಹಮ್ಮಿಕೊಳ್ಳಲಾಗಿದ್ದು, ಸದರಿ ಅವಧಿಯಲ್ಲಿ ಕುಷ್ಟರೋಗದ ಕುರಿತು ಅರಿವು ಮೂಡಿಸಲಾಗುವುದು. ಕುಷ್ಟರೋಗ ಸಂಪೂರ್ಣ ಗುಣಮುಖ ಹೊಂದುವ ಕಾಯಿಲೆಯಾಗಿದ್ದು ರೋಗವನ್ನು ಶೀಘ್ರ ಪತ್ತೆ ಹಚ್ಚಿ ನಿಗದಿತ ಸಂಪೂರ್ಣ ಚಿಕಿತ್ಸೆಯನ್ನು ಪಡೆದು ನಿಯಮಿತ ವ್ಯಾಯಾಮ ಮಾಡಿದಲ್ಲಿ ಸಂಪೂರ್ಣ ಗುಣಮುಖರಾಗಬಹುದಾಗಿದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಬಹುವಿಧ ಔಷಧಿ ಚಿಕಿತ್ಸೆ ಉಚಿತವಾಗಿ ಲಭ್ಯವಿದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here