ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಳ್ಳುತ್ತಿದೆ. ಜಿಲ್ಲೆಯ ಎರಡು ಮುಖ್ಯ ಹಳ್ಳಗಳಾದ ತುಪ್ಪರಿ ಹಳ್ಳ ಮತ್ತು ಬೆಣ್ಣಿ ಹಳ್ಳದ ಪ್ರವಾಹದ ಬಗ್ಗೆ ನಿರಂತರ ನಿಗಾ ವಹಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎರಡು ಹಳ್ಳಗಳಿಗೆ ಸಂಬಂಧಿಸಿದ ಪಿಡಿಓಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಸ್ಥಾನಿಕವಾಗಿ ಕೇಂದ್ರ ಸ್ಥಾನದಲ್ಲಿದ್ದು, ತಾಲೂಕು ಆಡಳಿತಕ್ಕೆ ಮತ್ತು ಜಿಲ್ಲಾಡಳಿತಕ್ಕೆ ನೀರಿನ ಮಟ್ಟದ ಏರಿಕೆ ಹಾಗೂ ಪ್ರವಾಹದ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಅವರು ಶುಕ್ರವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಿ, ಜಿಲ್ಲೆಯ ಮಳೆ ಪ್ರಮಾಣ ಮತ್ತು ಹಾನಿ, ಕುಡಿಯುವ ನೀರು ಮತ್ತು ಮೇವು ಸಂಗ್ರಹಣೆ ಹಾಗೂ ಬೆಳೆಹಾನಿ ಪರಿಹಾರ ಪ್ರಗತಿ ಕುರಿತು ಪರಿಶೀಲಿಸಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ರೈತರು ಬಿತ್ತನೆ ಆರಂಭಿಸಿದ್ದಾರೆ. ಕೆರೆಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕಂದಾಯ, ಕೃಷಿ ಮತ್ತು ಪೊಲೀಸ್ ಇಲಾಖೆ ಜಾಗೃತಿ ವಹಿಸಿ, ಜನರ ಜೀವ ಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ರೈತರಿಗೆ ಸಕಾಲದಲ್ಲಿ ಬೀಜ, ಗೊಬ್ಬರ ಸಿಗುವಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಬಿತ್ತನೆಗೆ ಬೀಜ, ಗೊಬ್ಬರ ಕೊರತೆ ಆಗದಿರಲಿ
ಜಿಲ್ಲೆಯಲ್ಲಿ ಈಗಾಗಲೇ ಅಗತ್ಯಕ್ಕಿಂತ ಹೆಚ್ಚು ವಿವಿಧ ಪ್ರಕಾರದ ಬೀಜ ಮತ್ತು ಗೊಬ್ಬರಗಳ ದಾಸ್ತಾನು ಇದೆ.
ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ಗೊಬ್ಬರ ಪೂರೈಸಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಸರಾಸರಿ ಶೇ. 22ರಷ್ಟು ಭೂಮಿಯಲ್ಲಿ ಬಿತ್ತನೆ ಆಗಿದೆ. ಕಳೆದ ಎರಡಮೂರು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವದರಿಂದ ಬಿತ್ತನೆ ಕಾರ್ಯ ಮುಂದಿನ ದಿನಗಳಲ್ಲಿ ವೇಗ ಪಡೆಯುತ್ತದೆ.
ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಯಾವುದೇ ಬೀಜ, ಗೊಬ್ಬರದ ಕೊರತೆ, ಕೃತಕ ಅಭಾವ ಹಾಗೂ ನಿಗದಿತ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ರಶೀದಿ ಇಲ್ಲದೆ ಬೀಜ, ಗೊಬ್ಬರ ಮಾರಾಟ, ಅನಧಿಕೃತ ದಾಸ್ತಾನು, ಬೇರೆ ಗೊಬ್ಬರಗಳ ಜಿಂಕ್ ಲಿಂಕ್ ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿ, ಅಂತಹ ಅಂಗಡಿ ಸೀಜ್ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ನಿರ್ದೇಶಿಸಿದರು.