ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರವು ಸಂಪುಟ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಒಟ್ಟು 13 ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಲಾಗಿದ್ದು, ಆಡಳಿತಾತ್ಮಕ ಕಾರ್ಯಗಳ ಸಮನ್ವಯ ಹಾಗೂ ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಣೆಯ ಜವಾಬ್ದಾರಿ ನೀಡಲಾಗಿದೆ.
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.
ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.
ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದ್ದು, ಸಚಿವ ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳು, ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉಸ್ತುವಾರಿ ಹಂಚಿಕೆ ಮಾಡಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದು, ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.
ಇನ್ನು ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವ ಬೈರತಿ ಸುರೇಶ್ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
ಹಾಗೆಯೇ, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ. ಜಿಲ್ಲಾ ಉಸ್ತುವಾರಿ ಹಂಚಿಕೆ ಮೂಲಕ ಸರ್ಕಾರ ಆಡಳಿತಾತ್ಮಕ ಕಾರ್ಯಕ್ಷಮತೆ ಹೆಚ್ಚಿಸುವ ಹಾಗೂ ಜಿಲ್ಲಾವಾರು ಅಭಿವೃದ್ಧಿ ಯೋಜನೆಗಳ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶ ಹೊಂದಿದೆ.



