ಜಿಲ್ಲಾ ಮಟ್ಟದ 5ನೇ ಜನತಾದರ್ಶನ

0
District level 5th Janatadarshan
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಜಿಲ್ಲಾಡಳಿತದ ವತಿಯಿಂದ ಬುಧವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ 5ನೇ ಜನತಾ ದರ್ಶನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 175 ಅಹವಾಲುಗಳನ್ನು ಸ್ವೀಕರಿಸಲಾಯಿತು.

Advertisement

ಎಲ್ಲವನ್ನು ಪರಿಶೀಲಿಸಿ ಕಾಲಮಿತಿಯಲ್ಲಿ ಅಹವಾಲುಗಳನ್ನು ಪರಿಹರಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.

ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸಿದ ಸಾರ್ವಜನಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಸಮಸ್ಯೆಗಳ ಬಗ್ಗೆ, ಸಹಾಯ ಸೌಲಭ್ಯಗಳ ಬಗ್ಗೆ ಸುಮಾರು 175 ಅರ್ಜಿ ಅಹವಾಲುಗಳನ್ನು ಸಲ್ಲಿಸಿದರು. ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ಸತತ 4 ಗಂಟೆ ವೇದಿಕೆಯಲ್ಲಿ ನಿಂತು ಸರದಿಯಲ್ಲಿ ಬರುವ ಸಾರ್ವಜನಿಕರ ಸಮಸ್ಯೆಯನ್ನು ತಾಳ್ಮೆಯಿಂದ ಆಲಿಸಿದರು.

ಜನತಾ ದರ್ಶನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾನೂನಾತ್ಮಕವಾಗಿ, ಸ್ಥಳೀಯವಾಗಿ ಬಗೆಹರಿಸಬಹುದಾದ ಅಹವಾಲುಗಳನ್ನು ಜಿಲ್ಲಾಡಳಿತದ ಮಟ್ಟದಲ್ಲಿ ಬಗೆಹರಿಸಲಾಗುವುದು. ಉಳಿದವುಗಳನ್ನು ಹಿಂಬರಹ ನೀಡಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕರಿಗೆ ಸಚಿವರು ಸ್ಮಾರ್ಟ್ ಫೋನ್ ವಿತರಿಸಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಜಿಲ್ಲಾ ಪಂಚಾಯತ್ ಸಿಇಓ ಸ್ವರೂಪ ಟಿ.ಕೆ., ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಹುಡಾ ಆಯುಕ್ತ ಸಂತೋಷ ಬಿರಾದಾರ ವೇದಿಕೆಯಲ್ಲಿದ್ದರು. ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಜನತಾದರ್ಶನದಲ್ಲಿ ಭಾಗವಹಿಸಿದ್ದರು.

ಅವಳಿ ನಗರಗಳಲ್ಲಿ ವಿವಿಧೆಡೆ ಕಾನೂನುಬಾಹಿರ, ಅನಧಿಕೃತ ಬಡಾವಣೆಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆಗಳಾಗಿವೆ. ಹೊಸ ಕಾನೂನುಗಳನ್ವಯ ಅನಧಿಕೃತ ಬಡಾವಣೆಗಳ ಸಮಸ್ಯೆ ಬಗೆಹರಿಸಲು ಸರಕಾರದ ಗಮನಕ್ಕೆ ತರಲಾಗುವುದು. ಜಿಲ್ಲೆಯಲ್ಲಿ ಕಳೆದೊಂದು ವರ್ಷದಿಂದ ಕೈಗೊಂಡ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಸ್ವತಃ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದೆಂದು ಸಚಿವರು ತಿಳಿಸಿದರು.


Spread the love

LEAVE A REPLY

Please enter your comment!
Please enter your name here