ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ತಂಬಾಕುಮುಕ್ತ ಯುವ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ಪ್ರಸಕ್ತ ವರ್ಷ ಸೆಪ್ಟೆಂಬರ್ 24ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ತಂಬಾಕು ಮುಕ್ತ ಯುವ ಅಭಿಯಾನ 2.0 ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ ನೀಡಿದ್ದು, ಗದಗ ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0ಕ್ಕೆ ಜಿಲ್ಲಾಧಿಕಾರಿಗಳು ಬುಧವಾರ ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಿ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಹಾಗೂ ಎನ್‌ಟಿಸಿಪಿ ಕಾರ್ಯಕ್ರಮಾಧಿಕಾರಿಗಳಾದ ಡಾ.ವೆಂಕಟೇಶ ರಾಥೋಡ್ ಮಾತನಾಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಗದಗದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಕುರಿತು ವಿವರಿಸುತ್ತಾ, ಜಿಲ್ಲೆಯಲ್ಲಿ ಕಳೆದ ವರ್ಷ ಒಟ್ಟು 35 ಶಾಲಾ/ಕಾಲೇಜುಗಳಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆರೋಗ್ಯ-ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲಾ-ಕಾಲೇಜುಗಳ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಲಾಗಿದೆ.
ಕೋಟ್ಪಾ ದಾಳಿ ಹಮ್ಮಿಕೊಳ್ಳುವುದರ ಮೂಲಕ ವ್ಯಾಪಾರಸ್ಥರು, ತಂಬಾಕು ಬಳಕೆದಾರರಿಗೆ ಹಾಗೂ ಸಾರ್ವಜನಿಕರಲ್ಲಿ ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗಿದೆ ಹಾಗೂ ಈವರೆಗೆ 29 ಕೋಟ್ಪಾ ದಾಳಿ ನಡೆಸಿ 569 ಪ್ರಕರಣಗಳನ್ನು ದಾಖಲಿಸಿ ರೂ.90600/-ದಂಡ ಸಂಗ್ರಹಿಸಲಾಗಿದೆ. ಕೋಟ್ಪಾ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಈ ವರ್ಷ ಒಟ್ಟು 1749 ಜನರಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ. ಸಮುದಾಯ ಮಟ್ಟದಲ್ಲಿ ಕೇಂದ್ರೀಕೃತ ಗುಂಪು ಚರ್ಚೆಯ ಮೂಲಕ ಒಟ್ಟು 25 ಎಫ್.ಜಿ.ಡಿ. ಕಾರ್ಯಕ್ರಮ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳ ಪೌರಕಾರ್ಮಿಕರಿಗೆ ತಂಬಾಕು ಬಳಕೆಯಿಂದಾಗುವ ದುಷ್ಪರಿಣಾಮ ಹಾಗೂ ಬಾಯಿ ಕ್ಯಾನ್ಸರ್ ತಪಾಸಣೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಸಮಿತಿಯ ಸದಸ್ಯರು ಹಾಜರಿದ್ದರು.
ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕೋಟ್ಪಾ ದಾಳಿಗಳನ್ನು ಹಮ್ಮಿಕೊಳ್ಳಬೇಕು. ತಂಬಾಕು ಮುಕ್ತ ಗ್ರಾಮ ಮತ್ತು ತಂಬಾಕು ಮುಕ್ತ ಶಾಲೆ/ಕಾಲೇಜು ಘೋಷಣೆಗೆ ಕ್ರಮ ಕೈಗೊಳ್ಳಲು ವಿವಿಧ ಇಲಾಖೆಯ ಮುಖ್ಯಸ್ಥರು ಕಾರ್ಯೋನ್ಮುಖರಾಗಬೇಕು. ಶಾಲಾ ಕಾಲೇಜುಗಳ ಒಳಾವರಣ ಮತ್ತು ಹೊರಗಡೆ ತಂಬಾಕು ಮಾರಾಟ ನಿಷೇಧದ ಕುರಿತು ಗೋಡೆ ಬರಹ ಬರೆಸಬೇಕು. ತಾಲೂಕಾ ಮಟ್ಟದಲ್ಲಿಯೂ ಸಹ ಈ ಕುರಿತು ಸಭೆ ಜರುಗಿಸಬೇಕು. ಬಸ್‌ಸ್ಟಾö್ಯಂಡ್ ಹಾಗೂ ಶಾಲಾ ಕಾಲೇಜುಗಳ ಪಕ್ಕದಲ್ಲಿ ತಂಬಾಕು ಮಾರಾಟ ಮಾಡದ ಹಾಗೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.