ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಿ, ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ನಾಯಿ ಕಡಿತದ ಪ್ರಕರಣಗಳಿಗೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೊಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಪೂರ್ಣ ಪ್ರಮಾಣದ ಲಸಿಕೆಗಳು ಲಭ್ಯವಿದ್ದು, ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ಅದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ನೀರು ಸಂಗ್ರಹಣಾ ಪರಿಕರಗಳನ್ನು ಮೇಲಿಂದ ಮೇಲೆ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಚರಂಡಿ ನಾಲೆಗಳಲ್ಲಿ ಕಸಕಡ್ಡಿಗಳನ್ನು ಎಸೆಯದೇ ನೀರಿನ ಹರಿಯುವಿಕೆಗೆ ತಡೆಯಾಗದಂತೆ ನೋಡಿಕೊಳ್ಳಬೇಕು. ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಜನೆವರಿ 2024ರಿಂದ ಆಗಸ್ಟ 2024ರವರೆಗೆ ಒಟ್ಟು 8144 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಲಸಿಕೆಗಳು ಲಭ್ಯವಿದ್ದು, ಎಲ್ಲ ಪ್ರಕರಣಗಳಿಗೂ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಜನೆವರಿ 2024ರಿಂದ ಆಗಸ್ಟ 2024ರವರೆಗೆ 124 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು, ಯಾವುದೇ ಮರಣ ಸಂಭವಿಸಿಲ್ಲ.
ಜಿಲ್ಲೆಯಲ್ಲಿರುವ ಎಲ್ಲ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳಿಗೆ ಈ ಕುರಿತು ತರಬೇತಿಯನ್ನು ನೀಡಲಾಗಿದೆ ಎಂದು ಸಭೆಯಲ್ಲಿ ವಿವರಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಶಸ್ತçಚಿಕಿತ್ಸಕ ಬಿ.ಸಿ. ಕರಿಗೌಡ್ರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ.ಕೆ. ಭಜಂತ್ರಿ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ಸಮಿತಿಯ ಸದಸ್ಯರು ಹಾಜರಿದ್ದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯು 14-8-2024ರಂದು ಮಂಕಿಪಾಕ್ಸ್ನ್ನು ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಸ್ಥಿತಿ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ಜನೆವರಿ 2024 ರಿಂದ ಅಗಸ್ಟ್ 2024ರವರೆಗೆ 3007 ಕರುಳು ಬೇನೆ ಪ್ರಕರಣಗಳು, 245 ಡೆಂಘೀ ಹಾಗೂ 10 ಚಿಕುನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ ಎಂದು ಸಭೆಗೆ ತಿಳಿಸಿದರು.