ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸಿರುವ ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ, ವಿದ್ಯಾರ್ಥಿಗಳ ಹೋರಾಟಕ್ಕೆ ಇದು ಸಂದ ಜಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಿಕ್ಷಣ ಇಲಾಖೆಯ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಬಲ್ಲ ವ್ಯಕ್ತಿಗೆ ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದಾದ್ಯಂತ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ದೇಶದಾದ್ಯಂತ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲರಿಗೂ ಕೈಗೆಟುಕುವ ದರದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.



