HomeBengaluru Newsಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲಾನ್; ಖಾಸಗಿ ಶಾಲೆಗಳಿಗೆ ಮಹತ್ವದ ಸೂಚನೆ!

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಡಿಕೆ ಶಿವಕುಮಾರ್ ಮಾಸ್ಟರ್ ಪ್ಲಾನ್; ಖಾಸಗಿ ಶಾಲೆಗಳಿಗೆ ಮಹತ್ವದ ಸೂಚನೆ!

For Dai;y Updates Join Our whatsapp Group

ಬೆಂಗಳೂರು: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ನಗರ ಪ್ರದೇಶಗಳಲ್ಲಿ ಪ್ರತಿ ವಿದ್ಯಾರ್ಥಿಯಿಂದ ₹50 ಸಾವಿರಕ್ಕಿಂತ ಹೆಚ್ಚು ಶುಲ್ಕ ಪಡೆಯುವ ಖಾಸಗಿ ಶಾಲೆಗಳು ಗ್ರಾಮೀಣ ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ಪಡೆಯಬೇಕು. ಇಲ್ಲವಾದರೆ ಅಂತಹ ಶಾಲೆಗಳ ಶುಲ್ಕಕ್ಕೆ ಮಿತಿ (ಕ್ಯಾಪ್) ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಎಫ್‌ಕೆಸಿಸಿಐ ಆಯೋಜಿಸಿದ್ದ ಜಾಗತಿಕ ಸಿಎಸ್‌ಆರ್ ಮತ್ತು ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಗ್ರಾಮೀಣ ಭಾಗದ ಮಕ್ಕಳಿಗೂ ನಗರ ಪ್ರದೇಶದ ಮಕ್ಕಳಂತೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಕರ್ನಾಟಕಕ್ಕೆ ಸಿಎಸ್‌ಆರ್ ನಿಧಿಯಡಿ ಕಾರ್ಪೋರೇಟ್ ಸಂಸ್ಥೆಗಳಿಂದ ಪ್ರತಿ ವರ್ಷ ಸುಮಾರು ₹10 ಸಾವಿರ ಕೋಟಿ ಹಣ ಬರುತ್ತಿದೆ. ಆದರೆ ಇದರಲ್ಲಿ ಶೇ.50ರಷ್ಟು ಹಣ ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ ಎಂಬ ದೂರುಗಳಿವೆ. ಇದನ್ನು ತಡೆಯಲು ಹಿರಿಯ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಸಿಎಂ ತಿಳಿಸಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಬಳಕೆ:

ಸಿಎಸ್‌ಆರ್ ಹಣವನ್ನು ಮೊದಲ ಹಂತದಲ್ಲಿ ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಶಿಕ್ಷಣ ಅಭಿವೃದ್ಧಿಗೆ ಬಳಸಲಾಗುವುದು. ಬಳಿಕ ಆರೋಗ್ಯ ಸೇರಿದಂತೆ ಇತರ ಕ್ಷೇತ್ರಗಳಿಗೂ ಬಳಸಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಕಾರ್ಪೋರೇಟ್ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಮೂಲಸೌಕರ್ಯ ಅಭಿವೃದ್ಧಿ, ಹೊಸ ಶಾಲೆಗಳ ನಿರ್ಮಾಣ ಹಾಗೂ ಉತ್ತಮ ಶಿಕ್ಷಣ ವ್ಯವಸ್ಥೆಗೆ ಸಹಕಾರ ನೀಡಬೇಕು. ಇದಕ್ಕಾಗಿ ರಾಜ್ಯದಲ್ಲಿ ಈಗಾಗಲೇ 2 ಸಾವಿರ ಜಾಗಗಳನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದರು.

ಖಾಸಗಿ ಶಾಲೆಗಳಿಗೆ ದತ್ತು ಕಡ್ಡಾಯ:

ನಗರದ ಖಾಸಗಿ ಶಾಲೆಗಳು ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಕೇವಲ ಕಟ್ಟಡ ಅಭಿವೃದ್ಧಿ ಮಾಡುವುದಷ್ಟೇ ಅಲ್ಲದೆ ಉತ್ತಮ ಶಿಕ್ಷಕರನ್ನು ನಿಯೋಜಿಸುವತ್ತ ಗಮನಹರಿಸಬೇಕು ಎಂದು ಸಿಎಂ ಹೇಳಿದರು.

ತಮ್ಮ ಕುಟುಂಬದ ಶಿಕ್ಷಣ ಸಂಸ್ಥೆಯ ಕುರಿತು ಪ್ರಸ್ತಾಪಿಸಿದ ಡಿ.ಕೆ. ಶಿವಕುಮಾರ್, ತಮ್ಮ ಮಗಳು ಐಶ್ವರ್ಯಾ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಮಕ್ಕಳು ಬೆಂಗಳೂರು ಸೇರಿದಂತೆ ನಗರ ಮಕ್ಕಳೊಂದಿಗೆ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯ ಹೊಂದುವಂತೆ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಶಿಕ್ಷಣಕ್ಕಾಗಿ ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಆಗುವ ವಲಸೆ ಕಡಿಮೆ ಮಾಡುವ ಗುರಿಯೂ ಇದೆ ಎಂದು ಹೇಳಿದರು.

ನಿರುದ್ಯೋಗ ನಿವಾರಣೆಗೆ ‘ಯುವ ಸೇತು’ ಯೋಜನೆ:

ರಾಜ್ಯದ ನಿರುದ್ಯೋಗ ಸಮಸ್ಯೆ ಪರಿಹರಿಸಲು ‘ಯುವ ಸೇತು’ ಹೆಸರಿನಲ್ಲಿ ಉದ್ಯೋಗ ವಿನಿಮಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು. ಈ ಕೇಂದ್ರಗಳ ಮೂಲಕ ನಿರುದ್ಯೋಗಿ ಯುವಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಲು ಹಾಗೂ ಅಗತ್ಯ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಇದರಲ್ಲಿ ಶೇ.7.5ರಷ್ಟು ಮೀಸಲಾತಿಯನ್ನು ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ನೀಡಲು ಕಾನೂನು ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ಮುಂದಿನ 100 ದಿನಗಳಲ್ಲಿ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದ ಮಾನವ ಸಂಪನ್ಮೂಲ ಉತ್ತಮವಾಗಿದ್ದು, ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಉದ್ಯೋಗಿಗಳು ಮತ್ತು ಉದ್ಯೋಗದಾತರ ಹಿತವನ್ನು ಸಮತೋಲನವಾಗಿ ಕಾಪಾಡುವ ಮೂಲಕ ರಾಜ್ಯವನ್ನು ಉದ್ಯಮ ಸ್ನೇಹಿಯಾಗಿ ರೂಪಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಇಸ್ರೇಲ್ ಕೌನ್ಸಿಲ್ ಜನರಲ್ ಒರ್ಲಿ ವಿಟ್ಸ್‌ಮನ್, ಯುಎನ್ ಕಾಂಪ್ಯಾಕ್ಟ್ ನೆಟ್‌ವರ್ಕ್ ಕಾರ್ಯನಿರ್ವಾಹಕ ನಿರ್ದೇಶಕ ರತ್ನೇಶ್, ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img