ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಅವರೊಂದಿಗೆ 13 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸಚಿವ ಸಂಪುಟದ ಮೊದಲ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಮುದ್ರೆ ಒತ್ತಿದ್ದು,
ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರನ್ನು ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲು ಅನುಮೋದನೆ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರಿಂದ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವಂತೆ ಒತ್ತಾಯ ಕೇಳಿಬಂದಿದ್ದರೂ, ಹೈಕಮಾಂಡ್ ಆ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ.
ಜಾತಿ ಸಮೀಕರಣ ಮತ್ತು ರಾಜಕೀಯ ಸಮತೋಲನವನ್ನು ಗಮನದಲ್ಲಿಟ್ಟುಕೊಂಡು ದಲಿತ ಸಮುದಾಯದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಮಾತ್ರ ಡಿಸಿಎಂ ಸ್ಥಾನ ನೀಡಲು ನಿರ್ಧರಿಸಲಾಗಿದೆ.
ಮೊದಲ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸಲಿರುವವರು
ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಅವರ ಹೆಸರು ಸೇರಿದ್ದು, ಉಳಿದಂತೆ ಸತೀಶ್ ಜಾರಕಿಹೊಳಿ, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಡಾ. ಯತೀಂದ್ರ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಹಾಗೂ ಶರಣಪ್ರಕಾಶ್ ಪಾಟೀಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮೊದಲ ಪಟ್ಟಿಯಲ್ಲಿ ಹಲವು ಹಿರಿಯ ನಾಯಕರು ಮತ್ತು ಸಚಿವಾಕಾಂಕ್ಷಿಗಳಿಗೆ ಸ್ಥಾನ ಸಿಗದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಹಂತದಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಜಾತಿ ಸಮೀಕರಣಕ್ಕೆ ಆದ್ಯತೆ
ಸಚಿವ ಸಂಪುಟ ರಚನೆಯಲ್ಲಿ ಜಾತಿ ಮತ್ತು ಪ್ರಾದೇಶಿಕ ಸಮತೋಲನಕ್ಕೆ ಕಾಂಗ್ರೆಸ್ ನಾಯಕತ್ವ ಹೆಚ್ಚಿನ ಒತ್ತು ನೀಡಿದೆ. ಒಕ್ಕಲಿಗ ಸಮುದಾಯದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಮೂವರಿಗೆ ಅವಕಾಶ ನೀಡಲಾಗಿದೆ. ಲಿಂಗಾಯತ ಸಮುದಾಯಕ್ಕೂ ಮೂರು ಸ್ಥಾನಗಳು ದೊರೆತಿವೆ.
ದಲಿತ ಸಮುದಾಯದಡಿ ಡಾ. ಜಿ. ಪರಮೇಶ್ವರ್ ಸೇರಿ ಮೂವರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಕುರುಬ ಸಮುದಾಯದ ಇಬ್ಬರು ನಾಯಕರಿಗೂ ಅವಕಾಶ ಕಲ್ಪಿಸಲಾಗಿದೆ. ಇದಲ್ಲದೆ, ಪರಿಶಿಷ್ಟ ಪಂಗಡ (ಎಸ್ಟಿ), ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಗಳಿಂದ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ಸಮತೋಲನ ಸಾಧಿಸಲು ಪ್ರಯತ್ನಿಸಲಾಗಿದೆ.
ಇಂದು ಅದ್ಧೂರಿ ಪ್ರಮಾಣವಚನ
ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಹಲವು ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.
ಹೊಸ ಸರ್ಕಾರದ ಮೊದಲ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ನೀಡಿರುವ ಈ ರೂಪುರೇಷೆ ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದ ದಿಕ್ಕು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ.



