ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮನವೊಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಪಾನ್ನಿಂದಲೇ ವಿಡಿಯೋ ಕಾಲ್ ಮಾಡಿದ್ದಾರೆ. ಕಾರ್ಯಕ್ರಮವೊಂದನ್ನು ಮುಗಿಸಿ ಟೋಕಿಯೊಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯ ಮೂಲಕ ಆಶಾ ಕಾರ್ಯಕರ್ತೆಯರೊಂದಿಗೆ ಅವರು ಮಾತನಾಡಿದ್ದಾರೆ.
ಈ ವೇಳೆ ತಮ್ಮ ಮೇಲೆ ಕೋಪ ಮಾಡಿಕೊಳ್ಳದಂತೆ ಮನವಿ ಮಾಡಿದ ಸಿಎಂ, ಪ್ರತಿಭಟನೆಯನ್ನು ಹಿಂಪಡೆಯುವಂತೆ ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದ್ದಾರೆ. “ನಾನು ಹೇಳಿದ ನಂತರವೂ ನನ್ನ ಮಾತು ಕೇಳದೆ ಪ್ರತಿಭಟನೆ ಮುಂದುವರಿಸುತ್ತಿದ್ದೀರಲ್ಲ, ಹೆಣ್ಣುಮಕ್ಕಳಿಗೆಲ್ಲ ತೊಂದರೆಯಾಗುತ್ತಿದೆ” ಎಂದು ಅವರು ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರ ಬಗ್ಗೆ ತಮಗೆ ವಿಶೇಷ ಕಾಳಜಿ ಇದೆ ಎಂದು ಪುನರುಚ್ಚರಿಸಿದ್ದಾರೆ.
ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಕೂಡ ದೆಹಲಿಗೆ ತೆರಳಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದ ಸಿಎಂ, ಈ ಸಂಬಂಧ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ದಿನೇಶ್ ಎಂಬುವವರು ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿರುವುದನ್ನೂ ಅವರು ನೆನಪಿಸಿಕೊಂಡಿದ್ದಾರೆ.
ಮುಂಬರುವ ವಿಧಾನಸಭೆ ಅಧಿವೇಶನದ ವೇಳೆಗೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಡಿ.ಕೆ. ಶಿವಕುಮಾರ್ ನೀಡಿದ್ದಾರೆ. ಅಲ್ಲದೆ, ತಮ್ಮ ರಾಜಕೀಯ ಸಲಹೆಗಾರ ಜಿ.ಸಿ. ಚಂದ್ರಶೇಖರ್ ಅವರು ಆಶಾ ಕಾರ್ಯಕರ್ತೆಯರನ್ನು ಕರೆದು ಮಾತುಕತೆ ನಡೆಸಲು ಸಿದ್ಧರಿದ್ದಾರೆ ಎಂದು ತಿಳಿಸಿದ್ದಾರೆ.
“ನೀವು ಪ್ರತಿಭಟನೆ ಹಿಂಪಡೆಯಿರಿ. ನಾನು ನಿಮ್ಮನ್ನು ಕರೆಸಿ ಮಾತುಕತೆ ನಡೆಸಿ ಏನಾದರೂ ಒಂದು ಇತ್ಯರ್ಥ ಮಾಡುತ್ತೇನೆ. ನಿಮಗೆ ನ್ಯಾಯ ಸಿಗುವಂತೆ ಮಾಡುತ್ತೇನೆ. ನೀವು ಸಾಕಷ್ಟು ಶ್ರಮಪಡುತ್ತಿದ್ದೀರಿ. ನಿಮ್ಮ ಬಗ್ಗೆ ನನಗೆ ಕಾಳಜಿ ಇದೆ” ಎಂದು ಸಿಎಂ ಭರವಸೆ ನೀಡಿದ್ದಾರೆ.
ಗೌರವಧನ ಹೆಚ್ಚಳದ ಬೇಡಿಕೆ ಮುಂದಿಟ್ಟುಕೊಂಡು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಈ ವಿಡಿಯೋ ಕರೆ ಮಹತ್ವ ಪಡೆದುಕೊಂಡಿದೆ. ಸರ್ಕಾರದ ಭರವಸೆಯ ಬಳಿಕ ಪ್ರತಿಭಟನಾಕಾರರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.








