ಮಂಡ್ಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಒಟ್ಟು 1,793 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮ ನಡೆಯಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ಸಾರ್ವಜನಿಕರು ಹಾಗೂ ಗಣ್ಯರ ಅನುಕೂಲಕ್ಕಾಗಿ ಬೃಹತ್ ಜರ್ಮನ್ ಟೆಂಟ್ ನಿರ್ಮಿಸಲಾಗಿದ್ದು, ಆಕರ್ಷಕ ವೇದಿಕೆಯನ್ನೂ ಸಿದ್ಧಪಡಿಸಲಾಗಿದೆ.
1,643 ಕೋಟಿ ರೂ. ಕಾಮಗಾರಿಗಳಿಗೆ ಶಂಕುಸ್ಥಾಪನೆ:
ಕಾರ್ಯಕ್ರಮದಲ್ಲಿ ಒಟ್ಟು 1,643 ಕೋಟಿ ರೂಪಾಯಿ ಅಂದಾಜು ವೆಚ್ಚದ 40 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರ ಜೊತೆಗೆ ಈಗಾಗಲೇ ಪೂರ್ಣಗೊಂಡಿರುವ ಸುಮಾರು 149 ಕೋಟಿ ರೂಪಾಯಿ ವೆಚ್ಚದ 17 ನೂತನ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಫಲಾನುಭವಿಗಳಿಗೆ ಸವಲತ್ತು ವಿತರಣೆ:
ಅಭಿವೃದ್ಧಿ ಕಾಮಗಾರಿಗಳ ಚಾಲನೆ ಮತ್ತು ಲೋಕಾರ್ಪಣೆಯ ಜೊತೆಗೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದ್ದು, ಆಗಮಿಸುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಜಿಲ್ಲಾಡಳಿತ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.










