ಬೆಂಗಳೂರು:- ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿರುವ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಶಾಸಕರಿಗೆ ಔತಣಕೂಟ ಆಯೋಜನೆ ಮಾಡಿದ್ದರು. ಅಚ್ಚರಿ ಅಂದರೆ ಔತಣಕೂಟದಲ್ಲಿ ಇಬ್ಬರು ಬಿಜೆಪಿ ಶಾಸಕರು ಭಾಗಿಯಾಗಿದ್ದರು.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಡಿಕೆಶಿ ಭೋಜನಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನ ಶಾಸಕರು, ಸಚಿವರು ಭಾಗವಹಿಸಿದರು. ಈ ವೇಳೆ ಡಿಕೆ ಶಿವಕುಮಾರ್ಗೆ ಶುಭಾಶಯ ಕೋರಿ ಔತಣಕೂಟ ಸ್ವೀಕರಿಸಿದರು. ಇನ್ನು ಡಿಕೆಶಿ ಆಯೋಜಿಸಿರುವ ಈ ಔತಣಕೂಟದಲ್ಲಿ ಬಿಜೆಪಿ ಶಾಸಕರಾದ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಈ ಹಿಂದೆ ಆಪರೇಷನ್ ಕಮಲದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಹಾಗೇ ಕಳೆದ ವಿಧಾನಸಭಾ ಚುನಾವಣೆಯಲ್ಲೂ ಸಹ ಬಿಜೆಪಿಯಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ. ಆದ್ರೆ, ಪಕ್ಷದೊಂದಿಗೆ ಅಂತರ ಕಾಯ್ದುಕೊಂಡಿದ್ದಾರೆ. ಇದೀಗ ಕಾಂಗ್ರೆಸ್ ಔತಣಕೂಟದಲ್ಲಿ ಈ ಇಬ್ಬರು ಭಾಗಿಯಾಗಿರುವುದರಿಂದ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.