ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಡ್ಡಾಯ ಹೆಪಟೈಟಿಸ್ ಲಸಿಕೆ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ತಕ್ಷಣವೇ ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಆಸ್ಪತ್ರೆಯ ವೈದ್ಯಕೀಯ ಸೇವೆ, ಹೆರಿಗೆ ಮತ್ತು ಬಾಣಂತಿಯರ ವಿಭಾಗ, ನರ್ಸಿಂಗ್ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಹಾಗೂ ಬಿ.ಸಿ.ಎಂ. ಹಾಸ್ಟೆಲ್‌ಗಳ ಸ್ಥಿತಿಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಅವರು, ವೈದ್ಯಾಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಕಳೆದ ಮೂರು ವರ್ಷಗಳಲ್ಲಿ ತಾಯಂದಿರ ಸಾವಿನ ಪ್ರಮಾಣ ಅತ್ಯಂತ ಕಡಿಮೆಯಾಗಿರುವುದು ಹಾಗೂ ಗಂಭೀರ ಸ್ಥಿತಿಯಲ್ಲಿರುವ ಬಾಣಂತಿಯರ ಆರೈಕೆಗಾಗಿ ವಿಶೇಷ ವೈದ್ಯಕೀಯ ತಂಡ ರಚಿಸಿರುವುದನ್ನು ಶ್ಲಾಘಿಸಿದ ಅವರು, ಈ ಮಾದರಿಯನ್ನು ರಾಜ್ಯದ ಎಲ್ಲಾ ಬೋಧಕ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಜಾರಿಗೊಳಿಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಬಿ.ಸಿ.ಎಂ. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ಆಹಾರ ಹಾಗೂ ನೀರಿನ ಸಮಸ್ಯೆ ಇರುವ ಕುರಿತು ದೂರುಗಳು ಬಂದಿದ್ದು, ಇತ್ತೀಚಿನ ಆಹಾರ ವಿಷಬಾಧೆ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಗಂಡು ಮಕ್ಕಳ ಜನನ ಪ್ರಮಾಣ ಹೆಚ್ಚುತ್ತಿರುವುದು ಹಾಗೂ ಹೆಣ್ಣು ಮಕ್ಕಳ ಜನನ ಪ್ರಮಾಣ ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅಕ್ರಮ ಲಿಂಗಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಜಿಲ್ಲಾಡಳಿತದಿಂದ ಸಮಗ್ರ ವರದಿ ಪಡೆಯಲಾಗುವುದು ಎಂದು ಹೇಳಿದರು.
ಡಿ-ಗ್ರೂಪ್ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಪರಿಷ್ಕೃತ ವೇತನ, ಸಮವಸ್ತ್ರ ಸೇರಿದಂತೆ ಮಹಿಳಾ ಸಿಬ್ಬಂದಿಗೆ ಋತುಚಕ್ರ ರಜೆ ಜಾರಿಗೆ ತರಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ್ ಬಿದರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ನರ್ಸಿಂಗ್ ವಿದ್ಯಾರ್ಥಿಗಳ ಆರೋಗ್ಯದ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸುವುದಿಲ್ಲ. ಎಲ್ಲ ವಿದ್ಯಾರ್ಥಿಗಳಿಗೆ ಕೂಡಲೇ ಹೆಪಟೈಟಿಸ್ ಲಸಿಕೆ ನೀಡಬೇಕು.”
– ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ

