ವಿಜಯಸಾಕ್ಷಿ ಸುದ್ದಿ, ಗದಗ: “ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಮಹಿಳೆಯರು ಯಾವುದೇ ರೀತಿಯ ಅನ್ಯಾಯ, ದೌರ್ಜನ್ಯ ಅಥವಾ ಲೈಂಗಿಕ ಕಿರುಕುಳವನ್ನು ಸಹಿಸಿಕೊಳ್ಳದೆ ಧೈರ್ಯವಾಗಿ ಧ್ವನಿ ಎತ್ತಬೇಕು. ಮೌನವಾಗಿರುವುದು ಸಮಸ್ಯೆಗೆ ಪರಿಹಾರವಲ್ಲ,” ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2013 (POSH Act) ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣುಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಮಹಿಳೆಯರ ಪ್ರಗತಿಗೆ ಪುರುಷರ ಸಹಕಾರವೂ ಅಗತ್ಯವಾಗಿದೆ. ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ನಡೆದರೆ ಪೋಶ್ ಕಾಯ್ದೆಯಡಿ ರಚಿಸಲಾದ ಆಂತರಿಕ ದೂರು ಸಮಿತಿಗೆ ದೂರು ಸಲ್ಲಿಸಿ ನ್ಯಾಯ ಪಡೆಯಬಹುದು. ಆದರೆ ಕಾಯ್ದೆಯ ಸದ್ಬಳಕೆಯಾಗಬೇಕು, ದುರ್ಬಳಕೆಯಾಗಬಾರದು ಎಂದು ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಪೋಶ್ ಕಾಯ್ದೆ ಅನ್ವಯವಾಗುತ್ತದೆ. ದೂರು ಸಮಿತಿಗೆ ಸಿವಿಲ್ ನ್ಯಾಯಾಲಯದ ಅಧಿಕಾರವಿದ್ದು, ಉದ್ದೇಶಪೂರ್ವಕವಾಗಿ ಸುಳ್ಳು ದೂರು ನೀಡಿದರೆ ದೂರುದಾರರ ವಿರುದ್ಧವೂ ಕ್ರಮ ಕೈಗೊಳ್ಳುವ ಅವಕಾಶವಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಹಿಸಿಕೊಳ್ಳುವುದೂ ತಪ್ಪು. ಅನ್ಯಾಯ ನಡೆದಾಗ ಮೌನವಾಗದೆ, ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡುವ ಮನೋಭಾವವನ್ನು ಪ್ರತಿಯೊಬ್ಬ ಮಹಿಳೆಯೂ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಟಿ.ಎಸ್. ಚಂದ್ರಿಕಾ ಅವರು ಪೋಶ್ ಕಾಯ್ದೆಯ ಉದ್ದೇಶ, ದೂರು ಸಲ್ಲಿಸುವ ವಿಧಾನ ಹಾಗೂ ಸಮಿತಿಯ ಅಧಿಕಾರಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್., ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
“ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. ಕೆಲಸದ ಸ್ಥಳದಲ್ಲಿ ಕಿರುಕುಳ ಎದುರಾದರೆ ಧೈರ್ಯವಾಗಿ ದೂರು ನೀಡಿ ನ್ಯಾಯ ಪಡೆಯಬೇಕು.”
– ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ

