ದೊಡ್ಡಬಳ್ಳಾಪುರ: ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, 30 ವರ್ಷದ ಆರೋಪಿಯನ್ನು ಬಂಧಿಸಿ ಸುಮಾರು ₹25 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ.
ಸೆ.27ರಂದು ದೂರುದಾರರು ಮನೆಯಲ್ಲಿ 163 ಗ್ರಾಂ ಚಿನ್ನಾಭರಣ ಹಾಗೂ ನಗದು ಕಳುವಾಗಿರುವ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಎಂ.ವಿ. ಸೇರಿದಂತೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸ್ ಇನ್ಸ್ಪೆಕ್ಟರ್ ಡಾ. ನವೀನ್ ಕುಮಾರ್ ನೇತೃತ್ವದ ತಂಡ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಬಂಧಿತನನ್ನು ಅರಳಮಲ್ಲಿಗೆ ಗ್ರಾಮದ ನಿವಾಸಿ ಭದ್ರಪ್ಪ ಬಸಪ್ಪ ಹಡಪದ (30) ಎಂದು ಗುರುತಿಸಲಾಗಿದೆ. ಆರೋಪಿ ನರ್ಸಿಂಗ್ ಸೇವೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.



