ವಿಜಯಸಾಕ್ಷಿ ಸುದ್ದಿ, ಗದಗ : ನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದ್ದು, ಪ್ರತಿಯೊಂದು ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿವಸ ಕೂಲಿ ಕೆಲಸವನ್ನು ನೀಡಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಅಳತೆಗೆ ತಕ್ಕ ಹಾಕೆ ಪಡ ಕಡೆಯುವದು, ಕಡಿಸುವದು ನಿಮ್ಮ ಕರ್ತವ್ಯ ಎಂದು ಜಿಲ್ಲಾ ಪಂಚಾಯತ ಎಡಿಪಿಸಿ ಕಿರಣಕುಮಾರ ಸೂಚನೆ ನೀಡಿದರು.
ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆದ ಸಾಮೂಹಿಕ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲೆಡೆ ಆಯುಕ್ತಾಲಯದ ನಿರ್ದೇಶನದಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ `ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ’ ಅಭಿಯಾನ ಹಮ್ಮಿಕೊಂಡಿದ್ದು, ಮೇ ಅಂತ್ಯದವರೆಗೆ ಅಭಿಯಾನ ಇರುತ್ತದೆ ಎಂದರು.
ಈ ವರ್ಷ ಬಿಸಿಲಿನ ತಾಪ ಹೆಚ್ಚಾಗಿರುವ ಕಾರಣ, ಕೆಲಸದ ಸ್ಥಳಗಳಲ್ಲಿ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ, ನೆರಳು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಕೂಲಿಕಾರರು ಕೆಲಸದ ಸ್ಥಳದಲ್ಲಿ ಮಕ್ಕಳನ್ನು ಕರೆ ತರಬಾರದು. ಅದಕ್ಕಾಗಿ ಆರು ತಿಂಗಳಿಂದ ಮೂರು ವರ್ಷದ ಮಕ್ಕಳಿಗೆ ಕೂಸಿನ ಮನೆ ಆರಂಭ ಮಾಡಿದ್ದು, ತಮ್ಮ ಮಕ್ಕಳನ್ನು ಅಲ್ಲಿಯೇ ಬಿಟ್ಟು ಕೆಲಸಕ್ಕೆ ಹೋಗಲು ಅವಕಾಶವಿದೆ. ಇದರಿಂದ ಯೋಜನೆಯಡಿ ಹೆಚ್ಚಿನ ಜನರು ಪಾಲ್ಗೊಂಡು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ತಿಳಿಸಿದರು.
ದೇಶದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವದನ್ನು ಮರೆಯಬೇಡಿ.
ಕಡ್ಡಾಯವಾಗಿ ಮತದಾನ ಮಾಡಿ. ಮತದಾನ ನಿಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ಪ್ರಕಾಶ, ತಾಂತ್ರಿಕ ಸಹಾಯಕ ಪ್ರದೀಪ ನರೆಗಲ್, ಗ್ರಾಮ ಕಾಯಕ ಮಿತ್ರ, ನರೇಗಾ ಕೂಲಿ ಕಾರ್ಮಿಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.