ವಿಜಯಸಾಕ್ಷಿ ಸುದ್ದಿ, ಧಾರವಾಡ: ಕೇಂದ್ರ ಸರ್ಕಾರವು ಮಂತ್ರಾಲಯಗಳ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿಗಳು ಮತ್ತು ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ ಮಾಡುತ್ತದೆ. ಇದರಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟವನ್ನು ಕಾಪಾಡಬೇಕು ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಅವರು ಶನಿವಾರ ಸಂಜೆ ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ – ದಿಶಾ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ಇಲಾಖೆಗಳು ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಮತ್ತು ಅನುದಾನ ಬಳಕೆಯ ಬಗ್ಗೆ ನಿಯಮಿತವಾಗಿ ಸಂಸದರ ಕಚೇರಿಗೆ ವರದಿ ಸಲ್ಲಿಸಬೇಕು. ಕಾಮಗಾರಿಗಳ ಅನುಷ್ಠಾನ ಮತ್ತು ಫಲಾನುಭವಿಗಳ ಆಯ್ಕೆಯಲ್ಲಿ ಯಾವುದೇ ರೀತಿಯ ಗೊಂದಲ ಅಥವಾ ನಿಯಮ ಮೀರಿ ಮಾಡಬಾರದು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕರಾದ ಅರವಿಂದ ಬೆಲ್ಲದ, ಶಾಸಕರಾದ ಎಂ.ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ಮಹಾಪೌರರಾದ ಜ್ಯೋತಿ ಪಾಟೀಲ ಮತ್ತು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಮಾತನಾಡಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಕಾರ್ಯಕ್ರಮ ನಿರೂಪಿಸಿ, ಸಭೆ ನಿರ್ವಹಿಸಿದರು. ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಸ್ವಾಗತಿಸಿ, ವಂದಿಸಿದರು. ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ ಇದ್ದರು.
ದಿಶಾ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಯಲ್ಲಮ್ಮ ಗಾಣಿಗೇರ, ಮೌನೇಶ ಬಡಿಗೇರ, ಗುರುನಾಥ ಬಸವನಗೌಡರ, ಸಿದ್ದಪ್ಪ ಬಿದರಳ್ಳಿ, ಹನುಮಂತಪ್ಪ ಬೂದಿಹಾಳ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಪರಿಶೀಲನಾ ವರದಿಯನ್ನು ಸಭೆಯಲ್ಲಿ ಸಲ್ಲಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಭದ್ರಣನವರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ. ಸಂತಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ಆರ್.ಎನ್. ಸೊಪ್ಪಿಮಠ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಕಮಲಾ ಬೈಲೂರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕೃಷಿ ಇಲಾಖೆಯಿಂದ ಮುಂಗಾರು ಮಳೆ ಹಾನಿ ಕುರಿತು ನಡೆಸಿರುವ ಸಮೀಕ್ಷೆಯಿಂದ ಅಳ್ನಾವರ, ಕಲಘಟಗಿ ಭಾಗದ ಬೆಳೆಗಳಾದ ಗೋವಿನಜೋಳ, ಸೋಯಾಬಿನ್ ಬೆಳೆಗಳು ಹಾನಿಗೀಡಾಗಿರುವುದಾಗಿ ರೈತರು ಮನವಿ ಸಲ್ಲಿಸಿದ್ದಾರೆ. ಈ ಕುರಿತು ಕೃಷಿ ಇಲಾಖೆಯ ಅಧಿಕಾರಿಗಳು ಇನ್ನೊಮ್ಮೆ ಪರಿಶೀಲಿಸಬೇಕು. ಹೆಸರು ಬೆಳೆಹಾನಿ ಕುರಿತು ಸರಿಯಾದ ವರದಿ ನೀಡಿ, ಅರ್ಹ ರೈತರಿಗೆ ಪೂರ್ಣ ಪ್ರಮಾಣದ ವಿಮೆ ಸೌಲಭ್ಯ ದೊರಕುವಂತೆ ಅಧಿಕಾರಿಗಳು ಕ್ರಮವಹಿಸಿ, ಸಮೀಕ್ಷಾ ವರದಿ ನೀಡಬೇಕೆಂದು ಸಚಿವರು ನಿರ್ದೇಶಿಸಿದರು.


