ಹೈದರಾಬಾದ್: ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಸಾಫ್ಟ್‌ವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಹೈದರಾಬಾದ್ ನಗರದ ಮಿಯಾಪುರ್ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಇಶಿತಾ ಯಾದವ್ (26) ಮೃತರು. ಬುಧವಾರ ಸಂಜೆ ತಮ್ಮ ಅಪಾರ್ಟ್‌ಮೆಂಟ್‌ನ ಹಾಲ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಶಿತಾ ಅವರ ಶವ ಪತ್ತೆಯಾಗಿದೆ. ಈ ಬಗ್ಗೆ ಆಕೆಯ ಪತಿ ನೀರಜ್ ಭನ್ಸಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಇಶಿತಾ ಮತ್ತು ನೀರಜ್ 2020ರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದು, ಸುಮಾರು ಐದು ವರ್ಷಗಳ ಕಾಲ ಪರಸ್ಪರ ಸಂಪರ್ಕದಲ್ಲಿದ್ದರು. ಇಶಿತಾ ಬಿಹಾರದವರಾಗಿದ್ದರೆ, ನೀರಜ್ ಮಧ್ಯಪ್ರದೇಶದವನಾಗಿದ್ದ. ಈ ವರ್ಷ ಫೆಬ್ರವರಿ 20ರಂದು ಪಾಟ್ನಾದಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದು, ನಂತರ ದಂಪತಿ ಹೈದರಾಬಾದ್‌ನಲ್ಲಿ ವಾಸವಾಗಿದ್ದರು.
ಮದುವೆಯ ಬಳಿಕ ಹೆಚ್ಚುವರಿ ವರದಕ್ಷಿಣೆಗಾಗಿ ನೀರಜ್ ಇಶಿತಾಗೆ ಕಿರುಕುಳ ನೀಡುತ್ತಿದ್ದನು ಎಂದು ಮೃತೆಯ ಪೋಷಕರು ಆರೋಪಿಸಿದ್ದಾರೆ. ಇತ್ತೀಚೆಗೆ ಆರಂಭಿಸಿದ ಸ್ಟಾರ್ಟ್‌ಅಪ್ ವ್ಯವಹಾರಕ್ಕೆ ಹಣ ಹೂಡಿಕೆ ಮಾಡುವಂತೆ ಒತ್ತಾಯ ಮಾಡುತ್ತಿದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೃತೆಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯಾದ ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಈ ಘಟನೆ ಮಹಿಳೆಯರ ಮೇಲಿನ ವರದಕ್ಷಿಣೆ ಕಿರುಕುಳದ ವಿರುದ್ಧ ಮತ್ತೊಮ್ಮೆ ಆತಂಕ ಮೂಡಿಸಿದೆ.



