ಚಿಕ್ಕೋಡಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರನ್ನು ನಿಂದಿಸಿದ ಪ್ರಕರಣದಲ್ಲಿ ಚಿಕ್ಕೋಡಿ ಪ್ರಥಮ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ವಿನೂತನ ಶಿಕ್ಷೆ ವಿಧಿಸಿದೆ.
ಯಕ್ಸಂಬಾ ಪಟ್ಟಣದ ಅನಿಲ್ ಪೂಜಾರಿ ಎಂಬಾತ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣದ ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆತನಿಗೆ ₹1,000 ದಂಡ ವಿಧಿಸಿದೆ.
ಇದರ ಜತೆಗೆ ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಒಟ್ಟು 50 ಸಸಿಗಳನ್ನು ನೆಡುವಂತೆ ನ್ಯಾಯಾಲಯ ಆದೇಶಿಸಿದೆ. ಸದಲಗಾ ಪೊಲೀಸ್ ಠಾಣೆ ಆವರಣದಲ್ಲಿ 25 ಸಸಿ ಹಾಗೂ ಚಿಕ್ಕೋಡಿ ನ್ಯಾಯಾಲಯದ ಆವರಣದಲ್ಲಿ 25 ಸಸಿ ನೆಡುವಂತೆ ಸೂಚಿಸಲಾಗಿದೆ.
ನ್ಯಾಯಾಲಯದ ಆದೇಶದಂತೆ ಸಸಿಗಳನ್ನು ನೆಡುವ ಕಾರ್ಯವನ್ನು ಪೂರ್ಣಗೊಳಿಸದಿದ್ದರೆ 30 ದಿನಗಳ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ ಪ್ರಕರಣದಲ್ಲಿ ದಂಡದ ಜತೆಗೆ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನೂ ವಹಿಸುವಂತೆ ಸೂಚಿಸಿರುವ ನ್ಯಾಯಾಲಯದ ಈ ವಿನೂತನ ತೀರ್ಪು ಗಮನ ಸೆಳೆದಿದೆ.



