ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಹೆಬ್ಬಾಳ ಮೂಲದ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಪಾಂಡುಪುರ ಗ್ರಾಮದ ಸಮೀಪ ನಡೆದಿದೆ.
Advertisement
ಮೋಹನ್ ಮೃತ ದುರ್ದೈವಿಯಾಗಿದ್ದು, ಬೆಂಗಳೂರಿನಿಂದ ಕಬ್ಬಾಳು ದೇವಸ್ಥಾನಕ್ಕೆ ಐವರು ಸ್ನೇಹಿತರು ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮೋಹನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.
ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಆಸ್ಪತ್ರೆಗೆ ರವಾನಿಸಿ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.