ಮಂಡ್ಯ: ಹಳೇ ಮೈಸೂರು ಭಾಗದ ಪ್ರಮುಖ ಜಲಮೂಲವಾಗಿರುವ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.
ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದ್ದು, ಹೊರಹರಿವಿನ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಶುರುವಾಗಿದೆ.
ನಿನ್ನೆ 95 ಅಡಿಯಷ್ಟಿದ್ದ ಜಲಾಶಯದ ನೀರಿನ ಮಟ್ಟ ಇಂದು 94 ಅಡಿಗೆ ಇಳಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ ಒಟ್ಟು 18.882 ಟಿಎಂಸಿ ನೀರು ಸಂಗ್ರಹವಿದೆ. ಇದರಲ್ಲಿ 6 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದ್ದು, ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಕೇವಲ 12 ಟಿಎಂಸಿ ಮಾತ್ರವಾಗಿದೆ.
ಇನ್ನು ಜಲಾಶಯಕ್ಕೆ 767 ಕ್ಯೂಸೆಕ್ ಒಳಹರಿವು ಇದ್ದರೆ, 4,604 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಒಳಹರಿವಿಗೆ ಹೋಲಿಸಿದರೆ ಹೊರಹರಿವಿನ ಪ್ರಮಾಣ ಹಲವು ಪಟ್ಟು ಹೆಚ್ಚಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಜಲಾಶಯದ ನೀರಿನ ಸಂಗ್ರಹ ಮತ್ತಷ್ಟು ಕುಸಿಯುವ ಸಾಧ್ಯತೆಯಿದೆ.
ಕೆಆರ್ಎಸ್ ಜಲಾಶಯದ ನೀರನ್ನು ಕೃಷಿ ಚಟುವಟಿಕೆಗಳ ಜೊತೆಗೆ ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಅಗತ್ಯಕ್ಕೂ ಬಳಸಲಾಗುತ್ತದೆ. ಹೀಗಾಗಿ ಬೇಸಿಗೆ ಆರಂಭಕ್ಕೂ ಮುನ್ನವೇ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ನೀರಿನ ಬಳಕೆ ಮತ್ತು ನಿರ್ವಹಣೆ ಸವಾಲಾಗುವ ಸಾಧ್ಯತೆಯಿದೆ.







