ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ತಾಲೂಕಿನಾದ್ಯಂತ ಈ ಬಾರಿ ಬರಗಾಲ ಆವರಿಸಿದ್ದು, ಮಳೆಯ ಕೊರತೆ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗುತ್ತಿದೆ. ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರು ಮತ್ತು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಿ. ಜಗದೇವ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಂಚಾಯಿತಿ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಬರ ನಿರ್ವಹಣೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮಳೆ ಕೊರತೆ ಉಂಟಾದರೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವುದು ಗ್ರಾ.ಪಂ ಮಟ್ಟದ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಜೂನ್ ಅಂತ್ಯದವರೆಗೂ ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆ ಉಂಟಾಗದಂತೆ ಪೂರ್ವ ನಿಯೋಜಿತ ರೂಪುರೇಷೆಯನ್ನು ತಯಾರಿಸುವಂತೆ ಸೂಚಿಸಿದರು.
ಬಾಡಿಗೆ ಬೋರ್‌ವೆಲ್ ಮೂಲಕ ನೀರು ಒದಗಿಸಲು ಬೋರ್‌ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳುವಾಗ ಸರಕಾರದ ನಿರ್ದೇಶನದಂತೆ ಕ್ರಮ ಕೈಗೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಘಟಕ ಚಾಲನೆಯಲ್ಲಿರುವಂತೆ ನೋಡಿಕೊಳ್ಳಲು ಗ್ರಾಮೀಣ ನೀರು ಪೂರೈಕೆ ಅಧಿಕಾರಿಗಳಿಗೆ ಸೂಚಿಸಿದರು. ಬರ ನಿರ್ವಹಣೆ ಬಗ್ಗೆ ನಿಷ್ಕಾಳಜಿ ವಹಿಸದೆ ಎಲ್ಲ ಹಂತದ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ನಿಗದಿತ ಸಮಯದಲ್ಲಿ ನಿರ್ವಹಿಸಬೇಕು. ಅಗತ್ಯವಿರುವ ಕಡೆಗೆ ಟ್ಯಾಂಕರ್ ಮೂಲಕ ನೀರು ಒದಗಿಸಲು ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ತಹಸೀಲ್ದಾರ್ ವಾಸುದೇವ ಸ್ವಾಮಿ ಮಾತನಾಡಿ, ಬರನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಇಲಾಖೆಯಿಂದ ತೆಗೆದುಕೊಳ್ಳಲಾಗುತ್ತಿದ್ದು, ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ವಿಶೇಷ ಕಾಳಜಿ ವಹಿಸುವದು ಅಗತ್ಯವಾಗಿದೆ. ನೀರಿನ ಸಮಸ್ಯೆ ಉಲ್ಬಣವಾಗದಂತೆ ಸಾರ್ವಜನಿಕವಾಗಿ ಇರುವ ನೀರು ಪೂರೈಕೆಗಳನ್ನು ಸರಿಯಾಗಿ ನಿರ್ವಹಿಸುವದಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತಾಧಿಕಾರಿಗಳು, ತೋಟಗಾರಿಕೆ, ಪಶುಪಾಲನೆ, ಅರಣ್ಯ ಮತ್ತು ಕುಡಿಯುವ ನೀರು ಪೂರೈಕೆ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಇದ್ದರು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಮಾತನಾಡಿ, ಜನಸಂಖ್ಯೆ ಅನುಸಾರ ಕುಡಿಯುವ ನೀರು ಪೂರೈಕೆಗೆ ಅಗತ್ಯವಾದ ಬೋರ್‌ವೆಲ್ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಜಲಾಗಾರ, ಪೈಪ್‌ಲೈನ್‌ಗಳ ಸುತ್ತ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು. ಮುಂದಿನ ಕೆಲ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.