ಬೆಂಗಳೂರು:ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಡ್ರಗ್ಸ್ ಡೀಲಿಂಗ್ನಲ್ಲಿ ತೊಡಗಿದ್ದ ವಿದೇಶಿ ಪ್ರಜೆ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಉಚೆ ನಡುಡಿ ಹಾಗೂ ಆಕಾಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೇಗೂರು ವ್ಯಾಪ್ತಿಯಲ್ಲಿ ಹಾಗೂ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದು, ಡ್ರಗ್ ವ್ಯವಹಾರ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಚಯಸ್ಥರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ–ಬಿಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಬೆಲೆಗೆ ಮಾದಕ ದ್ರವ್ಯಗಳನ್ನು ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದು,
ಆರೋಪಿಗಳಿಂದ ಸುಮಾರು 1 ಕೋಟಿ ರೂ. ಮೌಲ್ಯದ 101 ಗ್ರಾಂ ಕೊಕೇನ್ ಹಾಗೂ 481 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಡ್ರಗ್ ಜಾಲದ ಇನ್ನಿತರ ಸಂಪರ್ಕಗಳ ಕುರಿತು ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



