ದಾವಣಗೆರೆ: ರಾಜ್ಯದಲ್ಲಿ ಸಿಂಥೆಟಿಕ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ದಾವಣಗೆರೆ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಕಂಡುಬಂದಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಮತ್ತೊಬ್ಬ ಸಚಿವರ ಆಪ್ತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಇದುವರೆಗೆ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಡಿಸೆಂಬರ್ 23ರಂದು ಡ್ರಗ್ಸ್ ದಂಧೆ ನಡೆಸುತ್ತಿದ್ದ ಗ್ಯಾಂಗ್ ಮೇಲೆ ದಾವಣಗೆರೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಕಾಂಗ್ರೆಸ್ ಮುಖಂಡ ಹಾಗೂ ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ಆಪ್ತ ವೇದಮೂರ್ತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಆರೋಪಿಗಳಿಂದ ಸುಮಾರು 90 ಗ್ರಾಂ ಎಂಡಿಎಂಎ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿತ್ತು.
ಇದೇ ಪ್ರಕರಣದ ಮುಂದುವರಿದ ತನಿಖೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಅನ್ವರ್ ಬಾಷಾ ರನ್ನು ಇದೀಗ ಬಂಧಿಸಲಾಗಿದೆ. ಜೊತೆಗೆ ಪಾರಸ್, ಕೃಷ್ಣಮೂರ್ತಿ ಹಾಗೂ ಧೋನಿ ಅಲಿಯಾಸ್ ಮಂಜುನಾಥ್ ಎಂಬವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಆಡಳಿತದಲ್ಲಿ ಸಚಿವರ ಆಪ್ತರಿಂದಲೇ ಡ್ರಗ್ಸ್ ದಂಧೆ ನಡೆಯುತ್ತಿದ್ದರೂ ಪೊಲೀಸರು ನಿರ್ಭೀತಿಯಿಂದ ಕಿಂಗ್ ಪಿನ್‌ಗಳ ಹೆಡೆಮುರಿ ಕಟ್ಟಿದ್ದಾರೆ. ಎಸ್ಪಿ ಉಮಾ ಪ್ರಶಾಂತ್ ಕಾರ್ಯವೈಖರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



