ಬೆಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ರಸ್ತೆ ಕುಂದಲಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ಮೆಹಬೂಬ್ ಬಾಷಾ (59) ಎಂದು ಗುರುತಿಸಲಾಗಿದ್ದು, ಸುಂದರಮೂರ್ತಿ ಎಂಬಾತ ಕೊಲೆ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಮೊನ್ನೆ ಸಂಜೆ ಮೆಹಬೂಬ್ ಬಾಷಾ ಮದ್ಯ ಸೇವಿಸಿ ಮನೆ ಸಮೀಪ ಬಿದ್ದಿದ್ದರು ಎನ್ನಲಾಗಿತ್ತು. ಆರಂಭದಲ್ಲಿ ಇದು ಸಾಮಾನ್ಯ ಅಪಘಾತ ಅಥವಾ ಅಸ್ವಾಭಾವಿಕ ಸಾವು ಎಂದು ಶಂಕಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯಗಳಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು.
ಮರಣೋತ್ತರ ಪರೀಕ್ಷೆ ಹಾಗೂ ಸ್ಥಳೀಯರ ವಿಚಾರಣೆ ವೇಳೆ ಇದು ಕೊಲೆ ಪ್ರಕರಣ ಎಂಬುದು ಬಹಿರಂಗವಾಗಿದೆ. ಇಬ್ಬರು ವ್ಯಕ್ತಿಗಳ ನಡುವೆ ನಡೆದ ಗಲಾಟೆ ವೇಳೆ ಆರೋಪಿ ಸುಂದರಮೂರ್ತಿ, ಮೆಹಬೂಬ್ ಬಾಷಾ ಅವರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಮೆಹಬೂಬ್ ಬಾಷಾ ಮೃತಪಟ್ಟಿದ್ದಾರೆ. ಆರಂಭದಲ್ಲಿ ದಾಖಲಾಗಿದ್ದ ಯುಡಿಆರ್ ಪ್ರಕರಣವನ್ನು ಇದೀಗ ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದೆ.
ಈ ಸಂಬಂಧ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಸುಂದರಮೂರ್ತಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.



