ಬೆಂಗಳೂರು: ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಟ್ಟಡ ಕಾರ್ಮಿಕರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.
ಬನಶಂಕರಿಯ ಖಾಸಗಿ ಅಪಾರ್ಟ್ಮೆಂಟ್ವೊಂದರ ಬಳಿ ಇರುವ ಕಾರ್ಮಿಕರ ಶೆಡ್ನಲ್ಲಿ ಗುರುವಾರ ರಾತ್ರಿ ಕಾರ್ಮಿಕರ ಗುಂಪೊಂದು ಕುಡಿದ ಅಮಲಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದೆ ಎನ್ನಲಾಗಿದೆ. ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರ ನಡುವೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕಾರ್ಮಿಕರು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದರು. ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಬನಶಂಕರಿ ಠಾಣೆ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು, ಗಲಾಟೆಯಲ್ಲಿ ಭಾಗಿಯಾಗಿದ್ದ 8 ಕಾರ್ಮಿಕರನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



