HomeGadag Newsಮೊದಲು ಶಿಕ್ಷಣ... ನಂತರ ಜೀವನದ ನಿರ್ಧಾರ!

ಮೊದಲು ಶಿಕ್ಷಣ… ನಂತರ ಜೀವನದ ನಿರ್ಧಾರ!

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿನಿಯರು ಮೊದಲು ಶಿಕ್ಷಣ ಪೂರ್ಣಗೊಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ತಮ್ಮ ಕಾಲ ಮೇಲೆ ತಾವು ನಿಲ್ಲುವವರೆಗೆ ಪ್ರೀತಿ, ಪ್ರಣಯ ಅಥವಾ ಮದುವೆಯಂತಹ ನಿರ್ಧಾರಗಳಿಗೆ ಮುಂದಾಗದೆ ಭವಿಷ್ಯ ಮತ್ತು ಗುರಿ ಸಾಧನೆಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸರ್ಕಾರಿ ನೌಕರರ ಸಂಘ ಹಾಗೂ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ಸಂವಾದ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಯೋಸಹಜವಾಗಿ ಉಂಟಾಗುವ ಆಕರ್ಷಣೆಗೆ ಮರುಳಾಗಿ ಮನೆ ಬಿಟ್ಟು ಹೋಗುವಂತಹ ನಿರ್ಧಾರಗಳು ಇಡೀ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಗುರಿ ಮತ್ತು ವೃತ್ತಿ ಬದುಕಿನತ್ತ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.

ಪ್ರತಿಯೊಬ್ಬ ಪೋಷಕರ ಕನಸು ತಮ್ಮ ಮಗಳು ಸ್ವಾವಲಂಬಿಯಾಗಿ ಯಾರ ಮುಂದೆಯೂ ಕೈಚಾಚದಂತಾಗಬೇಕು ಎಂಬುದಾಗಿದೆ. ಆ ಕನಸನ್ನು ನನಸು ಮಾಡಲು ಹೆಣ್ಣುಮಕ್ಕಳು ವಿದ್ಯಾಭ್ಯಾಸದೊಂದಿಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ವಿದ್ಯಾರ್ಥಿನಿಯರು ಎಚ್ಚರಿಕೆ ವಹಿಸಬೇಕು. ತಮ್ಮ ಪ್ರೊಫೈಲ್‌ಗಳನ್ನು ಖಾಸಗಿಯಾಗಿ ಇಟ್ಟುಕೊಂಡು ಅಪರಿಚಿತರ ಸ್ನೇಹ ವಿನಂತಿಗಳನ್ನು ಸ್ವೀಕರಿಸಬಾರದು. ನಕಲಿ ಪ್ರೀತಿ, ಡೇಟಿಂಗ್ ಆ್ಯಪ್‌ಗಳು ಹಾಗೂ ಮಾನವ ಕಳ್ಳಸಾಗಣೆ ಜಾಲಗಳ ಬಗ್ಗೆ ಜಾಗೃತರಾಗಿರಬೇಕು ಎಂದು ಎಚ್ಚರಿಕೆ ನೀಡಿದರು.

ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ ಪ್ರತಿದಿನ ಕನಿಷ್ಠ ನಾಲ್ಕರಿಂದ ಆರು ಗಂಟೆಗಳ ಕಾಲ ಅಧ್ಯಯನಕ್ಕೆ ಮೀಸಲಿಡಬೇಕು. ಶ್ರಮ, ಶಿಸ್ತು ಹಾಗೂ ಗುರಿಯೊಂದಿಗೆ ಮುನ್ನಡೆದರೆ ಐಎಎಸ್, ಐಪಿಎಸ್, ನ್ಯಾಯಾಧೀಶರು, ವಕೀಲರು ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಸಾಧ್ಯ ಎಂದು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು.

ಮಹಿಳೆಯರಿಗೆ ಗೌರವ ನೀಡುವ ಸಂಸ್ಕೃತಿ ಮನೆಯಲ್ಲಿಯೇ ಆರಂಭವಾಗಬೇಕು. “ಯತ್ರ ನಾರ್ಯಸ್ತು ಪೂಜ್ಯಂತೆ” ಎಂಬ ಮಾತು ಕೇವಲ ಪಠ್ಯಕ್ಕೆ ಸೀಮಿತವಾಗದೆ ಜೀವನದಲ್ಲಿ ಅಳವಡಿಕೆಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ ಆರ್., ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಎಂ. ಗಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣ್ಣಬರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ವಿ. ಬಳ್ಳಾರಿ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶ್ರೀದೇವಿ ಎಸ್.ಎನ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಬಸವರಾಜ ಈರಣ್ಣನವರ್ ಅವರ ತಂಡ ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರು ಸ್ವಾಗತಿಸಿದರು. ಎಸ್.ಎಸ್. ಗೌಡರ್ ಕಾರ್ಯಕ್ರಮ ನಿರೂಪಿಸಿದರು.

“ಶಿಕ್ಷಣ ಮತ್ತು ಸ್ವಾವಲಂಬನೆಯೇ ವಿದ್ಯಾರ್ಥಿನಿಯರ ಮೊದಲ ಗುರಿಯಾಗಬೇಕು. ತಮ್ಮ ಕಾಲ ಮೇಲೆ ತಾವು ನಿಲ್ಲುವವರೆಗೆ ಪ್ರೀತಿ ಅಥವಾ ಮದುವೆಯಂತಹ ನಿರ್ಧಾರಗಳಿಗೆ ಮುಂದಾಗಬಾರದು.”

ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img