ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ರೈತರು ದೇಶದ ಬೆನ್ನೆಲುಬಾಗಿದ್ದು, ಅವರ ಅಭಿವೃದ್ಧಿಯೇ ದೇಶದ ಪ್ರಗತಿಗೆ ಮೂಲವಾಗಿದೆ. ವಿಶೇಷವಾಗಿ ಬಡ ರೈತರ ಮಕ್ಕಳು ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಉತ್ತರ ಕರ್ನಾಟಕ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ಹೋರಾಟಗಾರ ರವಿಕಾಂತ ಅಂಗಡಿ ಹೇಳಿದರು.
ತಾಲೂಕಿನ ಕಡಕೋಳ ಗ್ರಾಮದಲ್ಲಿ ಬಗರ್ ಹುಕುಂ ರೈತರ ಸಮಸ್ಯೆಗಳ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಹಲವು ವರ್ಷಗಳಿಂದ ಭೂಮಿ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ರೈತರು ತಮ್ಮ ಜಮೀನಿನ ಹಕ್ಕುಪತ್ರ ಪಡೆಯಲು ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಸರ್ಕಾರದ ಮಾರ್ಗಸೂಚಿಯಂತೆ ಸಂಬಂಧಿತ ಇಲಾಖೆಗೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಸಮರ್ಪಕವಾಗಿ ಸಂರಕ್ಷಿಸಬೇಕು. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ತಮ್ಮ ಹಕ್ಕುಗಳಿಗಾಗಿ ಕಾನೂನಾತ್ಮಕ ಹೋರಾಟ ನಡೆಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ ಅವರು, ಬಗರ್ ಹುಕುಂ ರೈತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ನಿರಂತರ ಹೋರಾಟ ನಡೆಸುವುದಾಗಿ ಭರವಸೆ ನೀಡಿದರು. ಉತ್ತರ ಕರ್ನಾಟಕದ ರೈತರು ನೀರಾವರಿ, ಭೂ ಹಕ್ಕು ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳಿಗೆ ಶಾಶ್ವತ ಪರಿಹಾರ ದೊರಕಬೇಕಾಗಿದೆ ಎಂದು ಹೇಳಿದರು.
ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿದ ಅವರು, ಆರ್ಥಿಕ ಸಂಕಷ್ಟಗಳ ನಡುವೆಯೂ ರೈತರು ತಮ್ಮ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಬಾರದು. ಗ್ರಾಮೀಣ ಭಾಗದ ಮಕ್ಕಳು ವೈದ್ಯರು, ಇಂಜಿನಿಯರ್‌ಗಳು, ಆಡಳಿತಾಧಿಕಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ರೈತರು ಭೂ ಹಕ್ಕು, ಹಕ್ಕುಪತ್ರ, ಬೆಳೆಸಾಲ ಹಾಗೂ ಸರ್ಕಾರಿ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ರವಿಕಾಂತ ಅಂಗಡಿ ತಿಳಿಸಿದರು.
ಸಭೆಯಲ್ಲಿ ಮಂಜುನಾಥ ಅರೆಪಳ್ಳಿ, ನಾಮದೇವ ಮಾಂಡ್ರೆ, ಅಂದಾನಪ್ಪ ಮುಳಗುಂದ, ಈಶ್ವರಗೌಡ ಗೌಡ್ರ, ಈಶ್ವರ ಹಿರೇಮಠ ಸೇರಿದಂತೆ ಸುಮಾರು 40ರಿಂದ 50 ರೈತರು ಭಾಗವಹಿಸಿದ್ದರು.
“ರೈತರ ಅಭಿವೃದ್ಧಿಯೊಂದಿಗೆ ಅವರ ಮಕ್ಕಳ ಶಿಕ್ಷಣಕ್ಕೂ ಆದ್ಯತೆ ನೀಡಬೇಕು. ಶಿಕ್ಷಣವೇ ಬಡ ರೈತರ ಕುಟುಂಬಗಳ ಭವಿಷ್ಯವನ್ನು ಬದಲಾಯಿಸುವ ದೊಡ್ಡ ಶಕ್ತಿಯಾಗಿದೆ.”
– ರವಿಕಾಂತ ಅಂಗಡಿ, ರಾಜ್ಯಾಧ್ಯಕ್ಷರು, ಉತ್ತರ ಕರ್ನಾಟಕ ಮಹಾಸಭಾ