ವಿಜಯಸಾಕ್ಷಿ ಸುದ್ದಿ, ಗದಗ: ಅರ್ಹ ಮತದಾರರು ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ನಿಖರ ಮತ್ತು ದೋಷರಹಿತ ಮತದಾರರ ಪಟ್ಟಿಯೇ ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಗಳ ಸಹಯೋಗದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಶುಕ್ರವಾರ ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಿದ್ದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ಇಪ್ಪತ್ತು ವರ್ಷಗಳಿಗೊಮ್ಮೆ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸುವ ಪ್ರಕ್ರಿಯೆ ನಡೆಯುತ್ತದೆ. ಈ ಬಾರಿ 2026ರ ವಿಶೇಷ ಪರಿಷ್ಕರಣೆಯಡಿ ಈಗಿರುವ ಮತದಾರರ ಮಾಹಿತಿಯನ್ನು ದೃಢೀಕರಿಸುವ ಜೊತೆಗೆ ಹೊಸ ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ನೀಡಿ ಸಹಕರಿಸಬೇಕು. ಯುವಜನರು ತಮ್ಮ ಕುಟುಂಬದ ಸದಸ್ಯರು ಹಾಗೂ ಪರಿಚಿತರ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿ, ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಪ್ರಕ್ರಿಯೆ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಎ.ಎ. ಕಂಬಾಳಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಚುನಾವಣೆಗಳ ಯಶಸ್ಸಿಗೆ ನಿಖರ ಮತದಾರರ ಪಟ್ಟಿಯೇ ಮೂಲಾಧಾರವಾಗಿದೆ. ಈ ಬಾರಿ ಸಮಗ್ರ ಪರಿಶೀಲನೆಯ ಮೂಲಕ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮುನ್ಸಿಪಲ್ ಹೈಸ್ಕೂಲ್ನಿಂದ ಆರಂಭವಾದ ಜಾಗೃತಿ ಜಾಥಾ ಗಾಂಧಿ ಸರ್ಕಲ್, ಮಹೇಂದ್ರಕರ ಸರ್ಕಲ್, ಟಾಂಗಾ ಕೂಟ, ಬಸವೇಶ್ವರ ಸರ್ಕಲ್, ಜೋಡು ಮಾರುತಿ ರಸ್ತೆ ಮೂಲಕ ಮುಳಗುಂದ ನಾಕಾದವರೆಗೆ ಸಂಚರಿಸಿತು. ಎನ್ಸಿಸಿ, ಸ್ಕೌಟ್ಸ್-ಗೈಡ್ಸ್, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಮತದಾರರ ಜಾಗೃತಿ ಘೋಷಣೆಗಳನ್ನು ಕೂಗಿ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿಡಿಪಿಐ ಆರ್.ಎಸ್. ಬುರಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
“ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಸಾರ್ವಜನಿಕರ ಸಹಕಾರದಿಂದ ಮಾತ್ರ ದೋಷರಹಿತ ಹಾಗೂ ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸಾಧ್ಯ.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು



