ಕ್ರೀಡೆಯೊಂದಿಗೆ ಶಿಕ್ಷಣಕ್ಕೆ ಒತ್ತು ನೀಡಿ: ಡಾ. ದುರಗೇಶ ಕೆ.ಆರ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡೆ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಒಂದಿಲ್ಲೋದು ಕ್ರೀಡೆಯಲ್ಲಿ ಪ್ರತಿಭೆಯನ್ನು ಹೊಂದಿರುತ್ತಾನೆ. ಮಕ್ಕಳಲ್ಲಿನ ಪ್ರತಿಭೆಯನ್ನು ದೈಹಿಕ ಶಿಕ್ಷಣ ಶಿಕ್ಷಕರು ಗುರುತಿಸಿ ಅವರಿಗೆ ತರಬೇತಿಯನ್ನು ನೀಡಿದರೆ ಉತ್ತಮ ಕ್ರೀಡಾಪಟುಗಳಾಗಿ ಈ ನಾಡಿನ ಘನತೆಯನ್ನು ಬೆಳಗಬಲ್ಲರು ಎಂದು ಗದಗ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್ ಅಭಿಪ್ರಾಯಪಟ್ಟರು.

Advertisement

ನಗರದ ದಿ. ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಗದಗ ವತಿಯಿಂದ ಆಯೋಜಿಸಿದ್ದ 2025-26ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ 14/17 ವಯೋಮಿತಿಯ ಪ್ರಾಥಮಿಕ, ಪ್ರೌಢಶಾಲಾ ಬಾಲಕ/ಬಾಲಕಿಯರ ವಾಲಿಬಾಲ್ ಕ್ರೀಡಾಕೂಟದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನ ನೀಡಲಾಗುತ್ತದೆ. ಕ್ರೀಡಾಪಟುಗಳಿಗೆ ಕ್ರೀಡಾ ವಸತಿ ನಿಲಯಗಳಲ್ಲಿ ನುರಿತ ತರಬೇತುದಾರರಿಂದ ಉನ್ನತ ಮಟ್ಟದ ಕೌಶಲಗಳ ತರಬೇತಿ ನೀಡಿ ಉತ್ತಮ ಕ್ರೀಡಾಪಟುಗಳನ್ನು ದೇಶಕ್ಕೆ ನೀಡಲಾಗುತ್ತಿದೆ. ಕ್ರೀಡಾಪಟುಗಳು ಕ್ರೀಡೆಯ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಗದಗ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಭಾಗವಹಿಸಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ಕೆಡಿಪಿ ನಾಮನಿರ್ದೇಶಿತ ಸದಸ್ಯ ಎಸ್.ಎನ್. ಬಳ್ಳಾರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಬಸವರಾಜ ಕಡೆಮನಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ಹಿರೇಮಠ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಎಫ್. ಪೂಜಾರ, ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಶೆಟ್ಟೆಪ್ಪನವರ, ಎಂ.ಕೆ. ಲಮಾಣಿ, ಬಿ.ಕೆ. ನಿಂಬನಗೌಡ್ರ, ಹಾಲನಗೌಡ ಪಾಟೀಲ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎನ್.ಆರ್. ನಿಡಗುಂದಿ, ಎಂ.ಎಸ್. ಕುಚಬಾಳ, ವಿ.ಎಫ್. ಕಲಕಂಬಿ, ರಾಜು ಚವ್ಹಾಣ, ಗದಗ ಶಹರ ಟಿಪಿಓ ಜೆ.ಬಿ. ಅಣ್ಣಿಗೇರಿ, ಪಿ.ಕೆ. ಅವರಡ್ಡಿ ಮುಂತಾದವರಿದ್ದರು.

ಬೆಳಗಾವಿ ವಿಭಾಗದ ಎಲ್ಲಾ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಸ್ವಾಗತಿಸಿದರು. ಯಾರೆಗುಡಿ ನಿರೂಪಿಸಿದರು. ಎಂ.ಎಸ್. ಕುಚಬಾಳ ವಂದಿಸಿದರು.

ಗದಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ಮುಕ್ತರಾಗಿ ಸದೃಢ ದೇಹದ ಜೊತೆಗೆ ಸದೃಢ ಮನಸ್ಸು ಹೊಂದಿ ಸದೃಢ ಭಾರತ ನಿರ್ಮಾಣ ಮಾಡುವಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರಲ್ಲದೆ, ಮೊಬೈಲ್ ಗೀಳಿನಿಂದ ಹೊರಬಂದು ಉತ್ತಮ ಜೀವನ ಸಾಗಿಸಿ ಎಂದರು.


Spread the love

LEAVE A REPLY

Please enter your comment!
Please enter your name here