ವಿಜಯಸಾಕ್ಷಿ ಸುದ್ದಿ, ಗದಗ : ಬೆಂಗಳೂರಿನಲ್ಲಿ ಜರುಗಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹ ಹಾಗೂ ಅಗತ್ಯದ ಪ್ರಚಾರ ನೀಡುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ರಾಜ್ಯ ಮಟ್ಟದ ಉದ್ಯೋಗ ಮೇಳದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಫೆ. 26 ಮತ್ತು 27 ರಂದು ಜರುಗಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಯುವಕರು ಪಾಲ್ಗೊಳ್ಳಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಮಲ್ಲೂರ ಬಸವರಾಜ್ ಮಾತನಾಡಿ, ರಾಜ್ಯ ಮಟ್ಟದ ಉದ್ಯೋಗ ಮೇಳವು ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದೆ. ಆಸಕ್ತ ಅಭ್ಯರ್ಥಿಗಳು https//skill connect.kaushalkar.com/ ತಂತ್ರಾಂಶದ ಮೂಲಕ ನೋಂದಾಯಿಸಿಕೊಂಡು ಉದ್ಯೋಗ ಮೇಳದ ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಯೋಜನಾ ಸಂಯೋಜಕರಾದ ಶಿವಾನಂದ ಕಂಬಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.