ಬೆಂಗಳೂರು: ಮನ್ರೇಗಾದ ಬದಲಾದ ರೂಪವಾದ ವಿಬಿಜಿ ರಾಮ್ ಜಿ ಯೋಜನೆಯಡಿ ಅರ್ಹ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಒಂದು ವಾರದೊಳಗೆ ಜಾಬ್ ಕಾರ್ಡ್ ಮೇಳ ಆಯೋಜಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.
ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ನಿಷ್ಕ್ರಿಯವಾಗಿದ್ದ ಹಲವು ಉದ್ಯೋಗ ಚೀಟಿಗಳನ್ನು (ಜಾಬ್ ಕಾರ್ಡ್) ರದ್ದುಪಡಿಸಲಾಗಿದೆ. ಆದರೆ, ಈ ಪ್ರಕ್ರಿಯೆಯಿಂದ ಬಡ ಗ್ರಾಮೀಣ ಕುಟುಂಬಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶಿಸಿದ್ದಾರೆ.
ಹೊಸದಾಗಿ ಉದ್ಯೋಗ ಬಯಸುವ ಅರ್ಹ ಗ್ರಾಮೀಣ ಕುಟುಂಬಗಳಿಗೆ ತಕ್ಷಣ ಜಾಬ್ ಕಾರ್ಡ್ ವಿತರಿಸುವಂತೆ ಸೂಚಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷಚೇತನರು, ಮಹಿಳಾ ನೇತೃತ್ವದ ಕುಟುಂಬಗಳು, ಭೂರಹಿತ ಕೂಲಿ ಕಾರ್ಮಿಕರು ಸೇರಿದಂತೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಎಲ್ಲ ಅರ್ಹರಿಗೆ ಜಾಬ್ ಕಾರ್ಡ್ ನೀಡಬೇಕು ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದ 5,927 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಒಂದು ವಾರದೊಳಗೆ ಜಾಬ್ ಕಾರ್ಡ್ ಮೇಳಗಳನ್ನು ಆಯೋಜಿಸಿ, ಅರ್ಹರಿಗೆ ಜಾಬ್ ಕಾರ್ಡ್ ವಿತರಿಸುವುದರ ಜತೆಗೆ ಉದ್ಯೋಗ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ವಿಬಿಜಿ ರಾಮ್ ಜಿ ಯೋಜನೆಯಡಿ ಕೇಂದ್ರ ಸರ್ಕಾರದ ಶೇ.60ರಷ್ಟು ಅನುದಾನವಾಗಿ ₹1,700 ಕೋಟಿ ಹಾಗೂ ರಾಜ್ಯ ಸರ್ಕಾರದ ಶೇ.40ರಷ್ಟು ಅನುದಾನವಾಗಿ ₹1,200 ಕೋಟಿ ಸೇರಿದಂತೆ ಒಟ್ಟು ₹2,900 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಕೂಲಿ ಪಾವತಿಗಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ₹1,000 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಯೋಜನೆಗೆ ಹಣದ ಕೊರತೆ ಇಲ್ಲದಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ಅನುಷ್ಠಾನ ತೃಪ್ತಿಕರವಾಗಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ಕಲ್ಪಿಸುವಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.



