ವಿಜಯಸಾಕ್ಷಿ ಸುದ್ದಿ, ಗದಗ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಅತ್ಯಂತ ಪಾರದರ್ಶಕ ಹಾಗೂ ನಿಖರವಾಗಿ ಪೂರ್ಣಗೊಳಿಸಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಚುನಾವಣಾ ಅಧಿಕಾರಿಗಳೊಂದಿಗೆ ನಡೆದ ಎಸ್ಐಆರ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ 967 ಮತಗಟ್ಟೆಗಳಲ್ಲೂ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಕಡ್ಡಾಯವಾಗಿ ಲಭ್ಯವಿದ್ದು, ಮನೆಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಣೆ ಹಾಗೂ ನಮೂನೆಗಳ ಭರ್ತಿ ಕಾರ್ಯವನ್ನು ಚುರುಕುಗೊಳಿಸಬೇಕು. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮತದಾರರ ಅನುಕೂಲಕ್ಕಾಗಿ ಎಲ್ಲಾ ಮತಗಟ್ಟೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಫಾರ್ಮ್ ಭರ್ತಿಗೆ ನೆರವಾಗಲು ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸ್ವಯಂಸೇವಕರನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಮದುವೆಯ ನಂತರ ಹೆಸರು ಬದಲಾದ ಮಹಿಳೆಯರು, ವಿಳಾಸ ಬದಲಾವಣೆ ಮಾಡಿಕೊಂಡವರು ಹಾಗೂ ಮರಣ ಹೊಂದಿದವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆಯನ್ನು ಸ್ಥಳೀಯ ಮಟ್ಟದಲ್ಲಿ ಸಮಗ್ರ ಪರಿಶೀಲನೆ ನಡೆಸಿದ ಬಳಿಕವೇ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಗೊಂದಲ ಅಥವಾ ಲೋಪದೋಷಗಳಿದ್ದಲ್ಲಿ ಸಾರ್ವಜನಿಕರು ತಹಸೀಲ್ದಾರ್ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ತಿದ್ದುಪಡಿ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಜುಲೈ 20ರೊಳಗೆ ಡಿಜಿಟೈಸೇಷನ್ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಬಿಎಲ್ಒ ಹಾಗೂ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್ಎ) ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಮೃತರು ಹಾಗೂ ಶಾಶ್ವತವಾಗಿ ಸ್ಥಳಾಂತರಗೊಂಡವರ ಹೆಸರುಗಳನ್ನು ನಿಯಮಾನುಸಾರ ಪರಿಶೀಲಿಸಿ ಮಾತ್ರ ಕೈಬಿಡಬೇಕು. ಯಾವುದೇ ಅರ್ಹ ಮತದಾರರ ಹೆಸರು ತಪ್ಪದೇ ಸೇರ್ಪಡೆಯಾಗುವಂತೆ ಹಾಗೂ ಅನರ್ಹರ ಹೆಸರು ಸೇರ್ಪಡೆಯಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ 18 ವರ್ಷ ಪೂರೈಸಲಿರುವ ಯುವ ಮತದಾರರನ್ನು ಫಾರ್ಮ್-6 ಮೂಲಕ ಈಗಿನಿಂದಲೇ ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಚುನಾವಣಾ ತಹಸೀಲ್ದಾರ್ ಸಂತೋಷ ಹಿರೇಮಠ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
“ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ಪ್ರಕ್ರಿಯೆ. ಯಾವುದೇ ಅರ್ಹ ಮತದಾರರ ಹೆಸರು ಕೈತಪ್ಪದಂತೆ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳು ಸಮನ್ವಯದಿಂದ ಕೆಲಸ ಮಾಡಬೇಕು.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ



