ವಿಜಯಸಾಕ್ಷಿ ಸುದ್ದಿ, ರೋಣ: ಪ್ರಜಾಪ್ರಭುತ್ವದ ಸದೃಢತೆಗೆ ನಿಖರ ಮತದಾರರ ಪಟ್ಟಿ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್-2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ರೋಣದಲ್ಲಿ ಜಾಗೃತಿ ರ‍್ಯಾಲಿ ಹಾಗೂ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.
ನಗರದ ಸಿದ್ದಾರೂಢ ದೇವಸ್ಥಾನದ ಆವರಣದಿಂದ ಆರಂಭವಾದ ಜಾಗೃತಿ ರ‍್ಯಾಲಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ನಾಲ್ಕು ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸ್ವೀಪ್ ಸಮಿತಿ ಸದಸ್ಯರು ಭಾಗವಹಿಸಿ ಮತದಾರರ ಜಾಗೃತಿ ಘೋಷಣೆಗಳನ್ನು ಕೂಗಿದರು. ಬಳಿಕ ಪೋತರಾಜನಕಟ್ಟಿ ಬಳಿ ಮಾನವ ಸರಪಳಿ ನಿರ್ಮಿಸಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿದರು.
ಈ ವೇಳೆ ಮಾತನಾಡಿದ ಚಂದ್ರಶೇಖರ ಬಿ. ಕಂದಕೂರ, ಜೂನ್ 30ರಿಂದ ಜುಲೈ 29ರವರೆಗೆ ನಡೆಯುವ ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸಬೇಕು. ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ಅಳಿಸುವಿಕೆ ಸೇರಿದಂತೆ ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸ್ವೀಕೃತಿ ಪಡೆಯುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.
ಹೊಸದಾಗಿ 18 ವರ್ಷ ಪೂರೈಸಿದ ಯುವಕರು ಹಾಗೂ ಇನ್ನೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದ ಅರ್ಹರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿಗಳು, ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ದೇವರಾಜ ಸಜ್ಜನಶೆಟ್ಟರ, ತಾಲೂಕು ಯೋಜನಾಧಿಕಾರಿ ಸಿ.ಎಸ್. ನೀಲಗುಂದ, ಕ್ಷೇತ್ರ ಶಿಕ್ಷಣಾಧಿಕಾರಿ ದಯಾನಂದ ಯಾವಗಲ್, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎ. ಫಣಿಬಂಧ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸ್ವೀಪ್ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
“ಪ್ರತಿ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ನಿಖರ ಮತದಾರರ ಪಟ್ಟಿಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರವೇ ಚುನಾವಣಾ ಪ್ರಕ್ರಿಯೆಯ ಯಶಸ್ಸಿನ ಮೂಲಾಧಾರ.”
– ಚಂದ್ರಶೇಖರ ಬಿ. ಕಂದಕೂರ, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ



