ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳುವ ಎಲ್ಲ ಕಾಮಗಾರಿಗಳ ನಾಮಫಲಕ ಹಾಗೂ ಎಲ್ಲ ಅಂಶಗಳನ್ನು ನಮೂದಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ಸೂಚನೆ ನೀಡಿದರು.
ತಾಲೂಕಿನ ಅಡರಕಟ್ಟಿ ಮತ್ತು ಹುಲ್ಲೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯ ಉದ್ಯೋಗ ಖಾತ್ರಿ ಯೋಜನೆಯ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿ ಅವರು ಮಾತನಾಡಿದರು.
ಉದ್ಯೋಗ ಖಾತ್ರಿ ನಾಮಫಲಕದಲ್ಲಿ ಕಡ್ಡಾಯವಾಗಿ ಆಯುಕ್ತಾಲಯದ ಏಕೀಕೃತ ಉಚಿತ ಸಹಾಯವಾಣಿ ಸಂಖ್ಯೆ (8277506000) ದಾಖಲಿಸುವಂತೆ ಸೂಚನೆ ನೀಡಿದರು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿ, ನರೇಗಾ ಯೋಜನೆಯಡಿ ಕೈಗೊಂಡ ಸಿಸಿ ರಸ್ತೆ ಕಾಮಗಾರಿ, ಸಿಸಿ ಗಟಾರ, ಸಿಡಿ ನಿರ್ಮಾಣ, ಸ್ಮಶಾನ ಅಭಿವೃದ್ಧಿ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು.
ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗಳ ಮೇಲೆ ನಿಗಾವಹಿಸಿ ಗುಣಮಟ್ಟದ ಕಾಮಗಾರಿಗಳಲ್ಲಿ ಯಾವುದೇ ರೀತಿಯ ಲೋಪ ಆಗದಂತೆ ನೋಡಿಕೊಳ್ಳುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕಾ ನರೇಗಾ ಸಿಬ್ಬಂದಿಗಳಿದ್ದರು.