ಬೆಂಗಳೂರು: ವಿಧಾನಸೌಧದ ಗ್ರಾಂಡ್ ಸ್ಟೆಪ್ ಮುಂಭಾಗದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ 110 ಹಳ್ಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿದರು. ಇದರ ಜತೆ ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ ಹಾಗೂ ವರುಣಮಿತ್ರ ತರಬೇತಿ ಹಾಗೂ ಯುನೈಟೆಡ್ ನೇಷನ್ ಇನೋವೇಷನ್ ಪ್ರಾಜೆಕ್ಟ್ ಫಾರ್ ವಾಟರ್ ಸೆಕ್ಯುರಿಟಿ ಇನ್ ಬೆಂಗಳೂರು ಸಿಟಿ ಯೋಜನೆ, ಈ ಎಲ್ಲಾ ಯೋಜನೆಗಳಿಗೆ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮದವರು ಬೈಯಲಿ, ಜನ ವಿರೋಧ ವ್ಯಕ್ತಪಡಿಸಲಿ, ವಿಪಕ್ಷಗಳು ಟೀಕಿಸಲಿ, ತಲೆಕೆಡಿಸಿಕೊಳ್ಳುವುದಿಲ್ಲ. ನೀರಿನ ದರ ಹೆಚ್ಚಳ ಮಾಡುತ್ತೇವೆ ಎಂದರು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ನೀರಿನ ದರದ ಬಗ್ಗೆ ಮಾಹಿತಿ ಕೊಡಿ. ಎಷ್ಟು ವರ್ಷಗಳಿಂದ ನೀರಿನ ದರ ಹೆಚ್ಚಿಸಿಲ್ಲ ಎಂದು ಮಾಹಿತಿ ಕೊಡಿ ಎಂಬುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ವೇದಿಕೆ ಮೇಲೆಯೇ ಅಧಿಕಾರಿಗಳಿಗೆ ಸೂಚಿಸಿದರು.