HomeGadag Newsಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು: ಎಚ್.ಪಿ. ಸಂದೇಶ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು: ಎಚ್.ಪಿ. ಸಂದೇಶ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಕಾನೂನು ಸೇವೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸುವ ಜವಾಬ್ದಾರಿ ವಕೀಲರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಆಡಳಿತ ನ್ಯಾಯಾಧೀಶ ಎಚ್.ಪಿ. ಸಂದೇಶ ಹೇಳಿದರು.

ಕೃಷಿ ನಗರದ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನ ಕೇಂದ್ರ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿಯ ಕಾನೂನು ಕಾಲೇಜು ಹಾಗೂ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ‘ಧಾರವಾಡ ತರಗತಿಯಿಂದ ನ್ಯಾಯಾಲಯದ ಕೋಣೆಗೆ-4ನೇ ವಲಯ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯದ ಮೇಲೆ ವಿಶ್ವಾಸವಿಟ್ಟು ನ್ಯಾಯಾಲಯದ ಮೆಟ್ಟಿಲೇರಿದ ಕಕ್ಷಿದಾರರಿಗೆ ನ್ಯಾಯ ದೊರಕಿಸುವುದು ವಕೀಲರ ಕರ್ತವ್ಯವಾಗಿದೆ. ಭವಿಷ್ಯದಲ್ಲಿ ವಕೀಲರಾಗಲಿರುವ ಕಾನೂನು ವಿದ್ಯಾರ್ಥಿಗಳು ಅನ್ಯಾಯಕ್ಕೊಳಗಾದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ಇಲ್ಲವಾದರೆ ಕಪ್ಪು ಕೋಟ್ ಧರಿಸುವುದಕ್ಕೆ ಅರ್ಥವಿಲ್ಲ ಎಂದು ಅವರು ಹೇಳಿದರು.

ಎಲ್‌ಎಲ್‌ಬಿ ವಿದ್ಯಾರ್ಥಿಗಳು ಶಿಸ್ತು, ಶ್ರಮ, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭೀತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನೊಂದವರು, ವಿಧವೆಯರು ಹಾಗೂ ಶೋಷಣೆಗೆ ಒಳಗಾದವರ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಸಿ. ಬಸವರಾಜು ಮಾತನಾಡಿ, ಮುಂದಿನ ದಿನಗಳಲ್ಲಿ ವಕೀಲರು ಮತ್ತು ಕಾನೂನು ತಜ್ಞರಾಗಿ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವ ಗುರಿ ಹೊಂದಬೇಕು. ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ನ್ಯಾಯ ದೊರೆಯಬೇಕು. ಕಾನೂನು ಜಾಗೃತಿಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಮಾತನಾಡಿ, ಸಾರ್ವಜನಿಕ ಸೇವಕರು ಕಾನೂನಿನ ಅರಿವು ಹೊಂದಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಬೇಕು. ಭವಿಷ್ಯದ ವಕೀಲರು ಸಮಾಜದ ಸಮಸ್ಯೆಗಳ ಬಗ್ಗೆ ಜಾಗೃತರಾಗಿದ್ದು, ಕಕ್ಷಿದಾರರಿಗೆ ಹೈಕೋರ್ಟ್‌ನ ನ್ಯಾಯ ದೊರಕಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷೆ ಅನು ಶಿವರಾಮನ್ ಮಾತನಾಡಿ, ಕಾನೂನು ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಕಾನೂನು ಅರಿವಿನ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನೇರಳೆ ವೀರಭದ್ರಯ್ಯ ವಿಜಯ್, ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ.ಯು. ಕೃಷ್ಣರಾಜ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಲ್ಲಪ್ಪ ಎಂ. ಬಡಿಗೇರ, ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪೂರ್ಣಿಮಾ ಪೈ, ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ನೇರಳೆ ವೀರಭದ್ರಯ್ಯ ವಿಜಯ್ ಸ್ವಾಗತಿಸಿದರು. ಪೂರ್ಣಿಮಾ ಪೈ ಕಾರ್ಯಕ್ರಮ ನಿರೂಪಿಸಿದರು. ಅಲ್ಲಪ್ಪ ಎಂ. ಬಡಿಗೇರ ವಂದಿಸಿದರು.

“ಅನ್ಯಾಯಕ್ಕೊಳಗಾದವರ ಪರವಾಗಿ ನಿಲ್ಲದಿದ್ದರೆ ಕಪ್ಪು ಕೋಟ್ ಧರಿಸುವುದಕ್ಕೆ ಅರ್ಥವಿಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವುದು ಕಾನೂನು ವಿದ್ಯಾರ್ಥಿಗಳು ಮತ್ತು ವಕೀಲರ ಮೊದಲ ಕರ್ತವ್ಯವಾಗಬೇಕು”

ಎಚ್.ಪಿ. ಸಂದೇಶ, ನ್ಯಾಯಮೂರ್ತಿಗಳು


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!