ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಾಳೆಹೊನ್ನೂರು ದಾವಣಗೆರೆಯ ಶ್ರೀಮದಭಿನವ ರೇಣುಕ ಮಂದಿರದಲ್ಲಿ ಜು. 21, 22ರಂದು ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ನಡೆಯಲಿದ್ದು, ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸಿಂಹಾಸನಾಧೀಶ್ವರ ಶ್ರೀ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷರು ಹಾಗೂ ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವೀರಶೈವ ಲಿಂಗಾಯತ ಸಂಸ್ಕೃತಿ ಸಂವರ್ಧನೆ ಹಾಗೂ ಜಾತಿ ಗಣತಿಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ನಿಲುವುಗಳ ಕುರಿತು ಚರ್ಚೆ ನಡೆಯಲಿದೆ. 21ರ ಬೆಳಿಗ್ಗೆ 11 ಗಂಟೆಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಸರ್ವರು ಈ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಭೆಗೆ ಹೆಚ್ಚಿನ ಮೆರಗು ನೀಡಬೇಕಾಗಿದೆ.
21ರಂದು ನಡೆಯುವ ಸಭೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಸಂಸದ ಜಗದೀಶ್ ಶೆಟ್ಟರ್, ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಶಿವರಾಜ ಪಾಟೀಲ, ಬಿ.ವೈ. ವಿಜಯೇಂದ್ರ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಅ.ಭಾ.ವೀ ಮಹಾಸಭೆ ರಾಜ್ಯಾಧ್ಯಕ್ಷ ಶಂಕರ್ ಬಿದರಿ, ಉಪಾಧ್ಯಕ್ಷ ಅಥಣಿ ವೀರಣ್ಣ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ. ಎ.ಎಚ್. ಶಿವಯೋಗಿಸ್ವಾಮಿ, ಜಿ.ಪಂ ಮಾಜಿ ಸದಸ್ಯ ಬಿ.ಎಂ. ವಾಗೀಶಸ್ವಾಮಿ ಭಾಗವಹಿಸಲಿದ್ದಾರೆ.
ಈ ಎರಡು ದಿನಗಳ ಕಾರ್ಯಕ್ರಮದ ನೇತೃತ್ವವನ್ನು ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಸಮಾಜದ ಅನೇಕ ಶಿವಾಚಾರ್ಯರು, ಹಿರಿಯ ಮುಖಂಡರು, ಪ್ರಮುಖರು ಆಗಮಿಸಲಿದ್ದು, ಭಕ್ತರು, ಸಮಾಜದ ಸರ್ವರೂ ಈ ಸಭೆಯಲ್ಲಿ ಭಾಗವಹಿಸುವಂತೆ ಮುಕ್ತಿಮಂದಿರ ಶ್ರೀಗಳು ತಿಳಿಸಿದ್ದಾರೆ.
ಜು.22ರಂದು ನಡೆಯುವ ಶೃಂಗ ಸಮ್ಮೇಳನವನ್ನು ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಬಿ.ವೈ. ರಾಘವೇಂದ್ರ, ಡಾ. ವಿಜಯ ಸಂಕೇಶ್ವರ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಸಿ.ಸಿ. ಪಾಟೀಲ, ಬಿ.ಪಿ. ಹರೀಶ್, ಮಾಜಿ ಶಾಸಕರಾದ ಎಚ್.ಎಸ್. ಶಿವಶಂಕರ್, ಮಹಿಮಾ ಪಟೇಲ್ ಭಾಗಹಿಸುವರು.



